ಬೆಳಗಾವಿ: ಅತಿವೃಷ್ಟಿ ಹಾಗೂ ನೆರೆ ಹಾವಳಿಯ ಸಂದರ್ಭದಲ್ಲಿ ತುರ್ತಾಗಿ ಜನರ ಪ್ರಾಣರಕ್ಷಣೆ ಹಾಗೂ ತಾತ್ಕಾಲಿಕ ಪುನರ್ವಸತಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಈಗಾಗಲೇ ತಾಲ್ಲೂಕುವಾರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೆರೆಹಾವಳಿ ಭೀತಿ ಎದುರಿಸುತ್ತಿರುವ 377 ಗ್ರಾಮಗಳ ಜನರಿಗೆ ಆಶ್ರಯ ಒದಗಿಸಲು 500 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ಜಾನುವಾರುಗಳನ್ನು ಸಹ ಸ್ಥಳಾಂತರಿಸಿ ಅವುಗಳನ್ನು ಇರಿಸಲು ವ್ಯವಸ್ಥೆ ಕಲ್ಪಿಸಲಾಗುವುದು. ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಹತ್ತು ವಾರ್ಡುಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗುವುದು ಹಾಗೂ ವಿದ್ಯುತ್ ಸಮಸ್ಯೆಗಳು ಎದುರಾಗದಂತೆ ಎಚ್ಚರ ವಹಿಸಲು ಹೆಸ್ಕಾಂ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ತಿಳಿಸಿದರು.
ರೈತರಿಗೆ ಬೀಜ, ಗೊಬ್ಬರ ವಿತರಣೆ:
ರೈತರಿಗೆ ಬೀಜ ಹಾಗೂ ಗೊಬ್ಬರ ನೀಡಲು ವ್ಯವಸ್ಥೆ ಮಾಡಲಾಗಿದ್ದು, ಮುಂಗಾರಿನಲ್ಲಿ ಬಿತ್ತನೆ ಬೀಜ, ಗೊಬ್ಬರ ಕೊರತೆಯಾಗದಂತೆ ಎಚ್ಚರಿಕೆಯನ್ನು ವಹಿಸಲು ಕೃಷಿ ಇಲಾಖೆಗೆ ಸೂಚನೆ ನೀಡಲಾಗಿದೆ. ರೈತರಿಗೆ ಜಿಲ್ಲೆಯ ಎಲ್ಲಾ ತಾಲೂಕ ಮಟ್ಟದಲ್ಲಿ ಹಾಗೂ 189 ಕೇಂದ್ರಗಳಲ್ಲಿ ಬೀಜ ವಿತರಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.
ರೈತರು ಬೀಜಗಳನ್ನು ರೈತ ಸಂಪರ್ಕ ಕೇಂದ್ರದ ಮೂಲಕ ಪಡೆಯಬೇಕು ರೈತಾಪಿ ವರ್ಗದವರಿಗೆ ಬೀಜ ವಿತರಣೆಯಲ್ಲಿ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲಾಗಿದ್ದು, ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಹಾಗೂ ಕೃತಕ ಅಭಾವ ಸೃಷ್ಟಿಸುವುದು ಕಂಡುಬಂದಲ್ಲಿ ಅಂತಹ ಅಂಗಡಿಗಳ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಕಾರಜೋಳ ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ:
ಕೋವಿಡ್ ಮಧ್ಯೆ ಜಿಲ್ಲೆಯಲ್ಲಿ ಚಿಕನ್ ಗುನ್ಯಾ, ಡೆಂಗ್ಯು ಪ್ರಕರಣಗಳು ದಾಖಲಾಗುತ್ತಿವೆ. ಈ ಕುರಿತು ಜಾಗೃತಿ ಮೂಡಿಸಿ, ಚಿಕಿತ್ಸೆಗೆ ತಯಾರಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಅದಕ್ಕೆ ಬೇಕಾಗುವ ಔಷಧಿ ತರಿಸಲಾಗುವುದು ಎಂದು ಹೇಳಿದರು