ಚಿಕ್ಕೋಡಿ : ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಗ್ರಾಮ ಪಂಚಾಯಿತಿ ಪಿಡಿಓಗಳಿಗೆ ಸೂಚನೆ ನೀಡಲಾಗಿದೆ ಎಂದು ವಿಧಾನ ಪರಿಷತ್‍ನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.
ಚಿಕ್ಕೋಡಿ ಪಟ್ಟಣದ ತಾಲೂಕಾ ಪಂಚಾಯತಿ ಸಭಾ ಭವನದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಮತ್ತು ಪಿಡಿಓಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ನಡೆಸಿದ ಅವರು, ಲಾಕ್‍ಡೌನ್ ಇರುವುದರಿಂದ ಹಳ್ಳಿಯ ಬಡ ಕೂಲಿ ಕಾರ್ಮಿಕರು ತೊಂದರೆಯಲ್ಲಿದ್ದಾರೆ. ಅವರಿಗೆ ಉದ್ಯೋಗ ಖಾತರಿ ಯೋಜನೆಯಡಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೂಲಿ ಕೆಲಸ ಕೊಡುವ ಕುರಿತು ಸೂಚನೆ ನೀಡಲಾಗಿದೆ.
ಅದರಲ್ಲಿಯೂ ತೀವ್ರ ಬರಗಾಲದಿಂದ ತತ್ತರಿಸಿ ಹೋಗಿರುವ ನಾಗರ ಮುನ್ನೋಳಿ ಹೋಬಳಿಯಲ್ಲಿ ನರೇಗಾ ಯೋಜನೆಯಡಿ ಹೆಚ್ಚಿನ ಕಾಮಗಾರಿ ಆರಂಭಿಸಬೇಕು. ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು. ಯಾವುದೇ ಹಳ್ಳಿಯ ಬಡ ಮತ್ತು ಕೂಲಿ ಕಾರ್ಮಿಕರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು ಎಂದು ಹೇಳಿದರು.