ಬೆಳಗಾವಿ : ಜಿಲ್ಲೆಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯನ್ನು ವಿಭಜನೆ ಮಾಡಿ, ಹಾಸನಕ್ಕೆ ವಿಸ್ತರಿಸಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ನಗರದಲ್ಲಿ ಹಿರಿಯ ಸಾಹಿತಿಗಳು ಹಾಗೂ ಉ.ಕ. ಪ್ರತ್ಯೇಕ ಹೋರಾಟ ಸಮಿತಿಯಿಂದ ವಿರೋಧ ವ್ಯಕ್ತವಾಯ್ತು.
ನಗರದ ವಿವಿಧಡೆ ಪ್ರತಿಭಟನಾ ಜಾಥಾ ನಡೆಸಿದ ಪ್ರತಿಭಟನಾಕಾರರು, ವಿಟಿಯು ವಿಭಜನೆ ಮಾಡುವುದನ್ನು ಸರ್ಕಾರ ತಕ್ಷಣ ಕೈಬಿಡಬೇಕೆಂದು ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗೆ ಮನವಿ ಮಾಡಿದರು.
ಈ ವೇಳೆ ಮಾತನಾಡಿದ ಹಿರಿಯ ಸಾಹಿತಿ ಸರ್ಜು ಕಾಟ್ಕರ್, ಅಂದು ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವನ್ನು ಬೆಳಗಾವಿಯಲ್ಲಿ ಸ್ಥಾಪಿಸಲಾಯಿತು. ಆದರೆ, ಮುಖ್ಯಮಂತ್ರಿ ಕುಮಾರಸ್ವಾಮಿ ವಿಭಜನೆ ಮಾಡ ಹೊರಟಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಉ.ಕ .ಭಾಗಕ್ಕೆ ರಾಜ್ಯದ ಸಮ್ಮಿಶ್ರ ಸರ್ಕಾರ ನಿರಂತರವಾಗಿ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ ಉ.ಕ. ಪ್ರತ್ಯೇಕ ಹೋರಾಟ ಸಮಿತಿ ಸದಸ್ಯರು, ರಾಜ್ಯದ ಸಮ್ಮಿಶ್ರ ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ ವಿವಿ ವಿಭಜಿಸುವುದಾದರೆ ಮೊದಲು ರಾಜ್ಯವನ್ನು ವಿಭಜಿಸಿ ನಂತರ ಈ ಭಾಗಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ಎಂದು ಎಚ್ಚರಿಕೆ ನೀಡಿದರು.