ಬೆಳಗಾವಿ: ಪಾಲಿಕೆ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರ ನೇರ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನೂರಾರು ಪೌರಕಾರ್ಮಿಕರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಪೌರ ಕಾರ್ಮಿಕರು, ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಪೌರಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರೂ ನೇಮಕ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ ಪೌರ ಕಾರ್ಮಿಕರಿಗೆ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯಗಳು ದೊರೆಯುತ್ತಿಲ್ಲ. ಸರ್ಕಾರಿ ಸೌಲಭ್ಯಗಳು ಸಿಗಲು ಪೌರ ಕಾರ್ಮಿಕರನ್ನು ನೇಮಕಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ನೂರಾರು ಪೌರಕಾರ್ಮಿಕರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿದರು.
ಈ ವೇಳೆ, ಪೌರಕಾರ್ಮಿಕರ ಸಂಘಟನೆಯ ಮುಖಂಡ ಸುಖದೇವ ಶಿಂಧೆ ಮಾತನಾಡಿ, ರಾಜ್ಯದ ಕೆಲವು ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರ ನೇಮಕಕ್ಕೆ ತಡೆಯಾಜ್ಞೆ ತರಲಾಗಿದೆ. ಆದರೆ, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕಾರ್ಯ ನಿರ್ವಹಿಸುವ ಪೌರಕಾರ್ಮಿಕರಿಗೆ ಇದು ಅನ್ವಯಿಸುವುದಿಲ್ಲ. ನೇರ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಅಮುಲ ಮಾಳಗೆ, ಮಾರುತಿ ಕವಳಗೆ, ಸತೀಶ ಅಪನ್ನವರ, ಪ್ರಕಾಶ ಸತ್ಯನಾಯ್ಕ, ಸಂಜಯ ಮತ್ತಿತರರು ಪಾಲ್ಗೊಂಡಿದ್ದರು.