ಬೆಳಗಾವಿ : ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರದ್ದುಪಡಿಸುವಂತೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಸಂಘಟನೆ ಸದಸ್ಯರು, ಕೊರೊನಾ ಸಂದಿಗ್ಧ ಪರಿಸ್ಥಿತಿಯಿಂದ ಕೂಲಿ ಕಾರ್ಮಿಕರು ಮತ್ತು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೋರೇಟ್ ವಲಯಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಜಾರಿಗೆ ತರಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕರು, ರೈತರು, ಯುವ ಜನತೆಯನ್ನು ಬದುಕಿಸಿಕೊಟ್ಟರೆ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗುತ್ತದೆ. ಆದ್ದರಿಂದ ತಕ್ಷಣವೇ ಭೂಸುಧಾರಣೆ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕು. ಬೀದಿ ಪಾಲಾಗಿರುವ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು. ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಪ್ರತಿ ಕುಟುಂಬಕ್ಕೆ ಏಪ್ರಿಲ್‍ನಿಂದ ಡಿಸೆಂಬರ್ ವರೆಗೆ ಪ್ರತಿ ತಿಂಗಳು 7,500 ಪರಿಹಾರ ಧನ ನೇರವಾಗಿ ಅವರ ಖಾತೆ ಜಮಾ ಮಾಡಬೇಕು. ನರೇಗಾ ಉದ್ಯೋಗದ ದಿನಗಳನ್ನು 200 ಕ್ಕೆ ಹೆಚ್ಚಿಸಬೇಕು ಮತ್ತು ಕೂಲಿ ಹಣವನ್ನು 600ಕ್ಕೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.