ಬೆಳಗಾವಿ: ಕನ್ನಡದಲ್ಲಿ ವ್ಯಾಸಂಗ ಮಾಡಿದ ಯುವಕರಿಗೆ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಮೀಸಲಾತಿ ನೀಡುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ ಕೂಡಲೇ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರವೇ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಸಾಹಿತ್ಯ ಭವನದಿಂದ ಚೆನ್ನಮ್ಮ ವೃತ್ತದ ಮುಖಾಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಲಾಯಿತು. ನಂತರ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕದ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ಅವರು, ಕನ್ನಡಿಗರಿಗೆ ಉದ್ಯೋಗದಲ್ಲಿ ಹೊಸ ಮೀಸಲಾತಿ ಕಲ್ಪಿಸುವ ಅವಶ್ಯಕತೆ ಇದೆ. ನಮ್ಮ ರಾಜ್ಯದ ಯುವಕರಿಗೆ ಕೆಲಸ ಸಿಗುವುದು ಕಷ್ಟವಾಗಿದ್ದು, ಸರ್ಕಾರ ಕೂಡಲೇ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಐಬಿಪಿಎಸ್ ನಲ್ಲಿ ತುಂಬುವ ಲಕ್ಷಾಂತರ ಹುದ್ದೆಗಳು ಬೇರೆ ರಾಜ್ಯದವರ ಪಾಲಾಗುತ್ತಿವೆ. ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದ್ದು, ಸರ್ಕಾರ ಈ ಕುರಿತು ಒಂದು ಸ್ಪಷ್ಟ ನಿರ್ಧಾರ ಕೈಗೊಂಡು ಕನ್ನಡಿಗರಿಗೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಕರವೇಯಿಂದ ಆಂದೋಲನ ಕೈಗೊಳ್ಳುವುದಾಗಿ ಎಚ್ಚರಿಸಿದರು.