ಅಥಣಿ: ತಾಲೂಕಿನ ಪಾರ್ಥನಹಳ್ಳಿ ಗ್ರಾಮಸ್ಥರು ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಾರ್ಥನಹಳ್ಳಿ- ಮಾಯಾನಟ್ಟಿಯಿಂದ ಶಿವನೂರ ಗ್ರಾಮದವರೆಗೆ ಸುಮಾರು 6 ಕಿ.ಮೀ. ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಂದರ್ಭ ಗ್ರಾಮಸ್ಥರಾದ ಶ್ರೀಶೈಲ ಈರಪ್ಪ ಕೇಂಪವಾಡ ಮಾತನಾಡಿ, ಕೆಲವು ವರ್ಷಗಳಿಂದ ರಸ್ತೆ ದುರಸ್ತಿ ಮಾಡುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಿದರೂ ಯಾವುದಕ್ಕೂ ಸ್ಪಂದನೆ ಸಿಕ್ಕಿಲ್ಲ. ಇದರಿಂದ ಅನಿವಾರ್ಯವಾಗಿ ನಾವು ಗ್ರಾಮ ಪಂಚಾಯಿತಿಗೆ ಬೀಗ ಹಾಕುವ ಜೊತೆಗೆ ಪ್ರತಿಭಟನೆ ಮಾಡಬೇಕಾಗಿದೆ. ಅಧಿಕಾರಿಗಳು ಅಸಡ್ಡೆ ಉತ್ತರ ನಿಡುತಿದ್ದಾರೆ. ಇದರಿಂದ ಗ್ರಾಮಸ್ಥರಿಗೆ ತುಂಬಾ ತೊಂದರೆಯಾಗುತ್ತಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ನಮ್ಮ ಸಮಸ್ಯೆಗೆ ಪರಿಹಾರ ನೀಡುವಂತೆ ಆಗ್ರಹಿಸಿದರು.
ವಿಷಯಕ್ಕೆ ಸಂಬಂಧಿಸಿದಂತೆ ಪಾರ್ಥಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್ ದೊಡ್ಡಮನಿ ಮಾತನಾಡಿ, ಕೆಲವು ದಿನಗಳ ಹಿಂದೆ ರಸ್ತೆ ದುರಸ್ತಿ ಮಾಡುವಂತೆ ಗ್ರಾಮಸ್ಥರು ಗಮನಕ್ಕೆ ತಂದಿದ್ದಾರೆ. ಸ್ವಲ್ಪ ಸಮಯ ವಿಳಂಬವಾಗಿದೆ. ರಸ್ತೆ ಸುಧಾರಣೆಗೆ ಯೋಜನೆ ರೂಪಿಸಲಾಗುವುದು. ಕೆಲವೇ ದಿನಗಳಲ್ಲಿ ರಸ್ತೆ ಕಾಮಗಾರಿ ಪ್ರಾರಂಭ ಮಾಡಲಾಗುವುದು ಎಂದು ಭರವಸೆ ನೀಡಿದರು.