ಬೆಳಗಾವಿ: ಸುವರ್ಣಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳು ಸ್ಥಳಾಂತರವಾಗಬೇಕು. ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ ಎಂದು ಆಗ್ರಹಿಸಿ ತಾಲೂಕಿನ ಬಸ್ತವಾಡ - ಹಲಗಾ ಗ್ರಾಮದಲ್ಲಿರುವ ಸುವರ್ಣಸೌಧ ಎದುರು ಉತ್ತರ ಕರ್ನಾಟಕ ವಿಕಾಸ ವೇದಿಕೆ ಪದಾಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಧರಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ, ಸಾಮಾಜಿಕ ಹೋರಾಟಗಾರ ಬಿ.ಡಿ.ಹಿರೇಮಠ ನೇತೃತ್ವದಲ್ಲಿ ನಡೆದ ಪ್ರತಿಭಟನೆ ನಡೆಯಿತು.
ಬೆಳಗಾವಿ ಸುವರ್ಣಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡುವ ನಿಟ್ಟಿನಲ್ಲಿ ಉತ್ತರ ಕರ್ನಾಟಕದ ಶಾಸಕರು ಅಧಿವೇಶನದಲ್ಲಿ ಚರ್ಚೆ ನಡೆಸಬೇಕು. ಪಕ್ಷಾತೀತವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಈ ಭಾಗದ ಶಾಸಕರು ಅಧಿವೇಶನದಲ್ಲಿ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
ಈ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಈ ಕೂಡಲೇ ಬೆಳಗಾವಿಯನ್ನು ಎರಡನೇ ರಾಜ್ಯಧಾನಿ ಎಂದು ಘೋಷಣೆ ಮಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮಕೈಕೊಳ್ಳಬೇಕು. ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡಬೇಕು. ಇಲ್ಲವೇ ಪ್ರತ್ಯೇಕ ಉತ್ತರ ಕರ್ನಾಟಕವನ್ನ ಕೊಡಬೇಕೆಂದು ಒತ್ತಾಯಿಸಿದರು.