ಬೆಳಗಾವಿ: ಸರಕಾರಿ ವಸತಿ ನಿಲಯಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ನೌಕಕರಿಗೆ ಸೇವಾ ಭದ್ರತೆ ಒದಗಿಸುವಂತೆ ಇಂದು ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ನೇತೃತ್ವದಲ್ಲಿ ನೌಕರರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಅಡುಗೆಯವರು, ಅಡುಗೆ ಸಹಾಯಕರು, ಕಾವಲುಗಾರರು, ಸ್ವಚ್ಛತಾ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಕಳೆದ 10-15 ವರ್ಷದಿಂದ ಕೆಲಸ ಮಾಡುತ್ತಿರುವ ನೌಕಕರಿಗೆ ಕೊರೊನಾದಿಂದಾಗಿ ಸಮಸ್ಯೆಯಾಗಿದೆ. ಐದಾರು ತಿಂಗಳಿಂದ ವಸತಿ ನಿಲಯಗಳ ಬಂದ್ ಆಗಿವೆ. ಸರಕಾರ ವೇತನ ನೀಡಿಲ್ಲ. ಆರ್ಥಿಕ ಸಂಕಷ್ಟದಿಂದ ನೂರಾರು ಕುಟುಂಬಗಳು ಬೀದಿ ಬಂದಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
10-15 ವರ್ಷದಿಂದ ಸೇವೆ ಸಲ್ಲಿಸುತ್ತಿರುವ ನೌಕರರನ್ನು ಖಾಯಂಗೊಳಿಸಬೇಕು. ಕೊರೊನಾದಿಂದಾಗಿ ಕೆಲಸವಿಲ್ಲದ ಸಮಯದ ವೇತನವನ್ನು ಪಾವತಿಸಬೇಕು. ಬಾಕಿ ವೇತನವನ್ನು ಬಿಡುಗಡೆಗೊಳಿಸಬೇಕು. ಕಾರ್ಮಿಕರ ವಿರೋಧ ನೀತಿ ರದ್ದುಪಡಿಸಬೇಕು. ನೌಕರರ ವೇತನವನ್ನು ಸಾವಿರಕ್ಕೆ ಏರಿಕೆ ಮಾಡಬೇಕು ಎಂದು ಮನವಿ ಮೂಲಕ ಆಗ್ರಹಿಸಿದರು.