ಚಿಕ್ಕೋಡಿ: ಪುರಸಭೆಯ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳ ಅಡಿಯಲ್ಲಿ ಬಿಡುಗಡೆಯಾಗುವ ಅನುದಾನ ಹಂಚಿಕೆಯಲ್ಲಿ ಜೆಡಿಎಸ್ ಸದಸ್ಯರಿರುವ ವಾರ್ಡ್‌ಗಳಿಗೆ ತಾರತಮ್ಯ ಮಾಡಲಾಗುತ್ತಿದೆಯೆಂದು ಆರೋಪಿಸಿ ಬೆಳಗಾವಿ ಜೆಲ್ಲೆಯ ಮೂಡಲಗಿ ತಾಲೂಕಿನಲ್ಲಿ ಜೆಡಿಎಸ್ ಮುಖಂಡರು ಧರಣಿ ನಡೆಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಜೆಡಿಎಸ್ ಮುಖಂಡ ಭೀಮಪ್ಪ ಗಡಾದ ಮಾತನಾಡಿ, 2018 ರಲ್ಲಿ ಅನುಮೋದನೆಯಾಗಿರುವ ಅನುದಾನದಲ್ಲಿ ಕೇವಲ ಬಿಜೆಪಿ ಸದಸ್ಯರಿರುವ ವಾರ್ಡ್‌ಗಳಿಗೆ ಮಾತ್ರ ಅನುದಾನ ನೀಡಲಾಗಿದೆ. ಈ ಬಗ್ಗೆ ಪುರಸಭೆ ಅಧಿಕಾರಿಗಳನ್ನು ವಿಚಾರಿಸಿದರೆ, ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆದೇಶವಾಗಿದೆಯೆಂದು ಸಬೂಬು ಹೇಳುತ್ತಿದ್ದಾರೆ ಎಂದು ದೂರಿದರು.
ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ, ತಾರತಮ್ಯ ಸರಿಪಡಿಸುವ ತನಕ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲವೆಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.
ಮಧ್ಯಾಹ್ನದ ವೇಳೆಗೆ ಪ್ರತಿಭಟನಾ ಸ್ಥಳಕ್ಕೆ ಬಂದ ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಇನ್ನು ಮುಂದೆ ಕ್ರಿಯಾ ಯೋಜನೆಗಳಲ್ಲಿ ತಾರತಮ್ಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಜೆಡಿಎಸ್ ಮುಖಂಡರು ಪ್ರತಿಭಟನೆ ಹಿಂಪಡೆದಿದ್ದಾರೆ.