ಬೆಳಗಾವಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಮಿಕ, ರೈತ ನೀತಿ ವಿರೋಧಿಸಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾ ಭದ್ರತೆ, ಸೌಲಭ್ಯಗಳಿಗೆ ಆಗ್ರಹಿಸಿ ಬೆಳಗಾವಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕ ಮತ್ತು ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾ ಭದ್ರತೆ ಮತ್ತು ಸೌಲಭ್ಯಗಳು ದೊರೆಯುತ್ತಿಲ್ಲ. ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಪಬ್ಲಿಕ್ ಶಾಲೆಗಳಿಗೆ ಜೋಡಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.
ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಂದ ಕೆಲಸ ಮಾಡಿಸಿಕೊಂಡು ಸೌಲಭ್ಯಗಳು ಮತ್ತು ಸೇವಾ ಭದ್ರತೆ ನೀಡುತ್ತಿಲ್ಲ. ಕೊರೊನಾ ವೇಳೆ ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಮರೆತು ಅವರನ್ನು ಅತಂತ್ರರನ್ನಾಗಿಸುವ ಪ್ರಯತ್ನ ನಡೆದಿದೆ. ಸರ್ಕಾರ ಕಾರ್ಮಿಕ ವಿರೋಧಿ ನೀತಿ ಕೈಬಿಡಬೇಕು ಎಂದು ಆಗ್ರಹಿಸಿದರು.