ಬೆಳಗಾವಿ: ನಾಳೆ ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲಿಷ್ ಭಾಷಾ ಪರೀಕ್ಷೆಗೆ ಹೊರ ರಾಜ್ಯದ 76, ಹೊರ ಜಿಲ್ಲೆಯ 1569 ಸೇರಿ ಜಿಲ್ಲೆಯಲ್ಲಿ 48,171 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ಡಿಡಿಪಿಯು ರಾಜಶೇಖರ ಪಟ್ಟಣಶೆಟ್ಟಿ ಮಾಹಿತಿ ನೀಡಿದ್ದಾರೆ.
ಪರೀಕ್ಷೆಗೆ ಜಿಲ್ಲೆ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ. ಕೊರೊನಾ ಕಾರಣಕ್ಕಾಗಿ ದ್ವಿತೀಯ ಪಿಯುಸಿ ಇಂಗ್ಲಿಷ್ ಭಾಷಾ ಪರೀಕ್ಷೆ ಮುಂದೂಡಿಕೆಯಾಗಿತ್ತು. ಹೊರ ಜಿಲ್ಲೆಗಳಲ್ಲಿ ವ್ಯಾಸಾಂಗ ಮಾಡುತ್ತಿದ್ದ 743 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 21,612 ವಿದ್ಯಾರ್ಥಿಗಳು ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ. 34 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಪರಸ್ಪರ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಪ್ರತಿ ಕೊಠಡಿಗೆ 24 ವಿದ್ಯಾರ್ಥಿಗಳನ್ನು ಸೀಮಿತಗೊಳಿಸಲಾಗಿದೆ. ಇನ್ನು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 826 ಹೊರ ಜಿಲ್ಲೆಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 26,559 ವಿದ್ಯಾರ್ಥಿಗಳು ಹಾಜರಾಗಲಿದ್ದು 45 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ವಿಶೇಷ ಎಂದರೆ ಜಿಲ್ಲೆಯ ಯಾವೊಂದು ಪರೀಕ್ಷಾ ಕೇಂದ್ರಗಳು ಕಂಟೈನ್ಮೆಂಟ್ ಝೋನ್ನಲ್ಲಿ ಇಲ್ಲ.
ಶೈಕ್ಷಣಿಕ ಜಿಲ್ಲೆಯ 47 ವಿದ್ಯಾರ್ಥಿಗಳು ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 29 ವಿದ್ಯಾರ್ಥಿಗಳು ಇ–ಪಾಸ್ ಪಡೆದುಕೊಂಡಿದ್ದಾರೆ. ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಎರಡು ಬಾರಿ ಸ್ಯಾನಿಟೈಸರ್ ಸಿಂಪಡಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಾಸ್ಕ್ ನೀಡಲಾಗುತ್ತಿದ್ದು, ಪರೀಕ್ಷೆ ನಡೆಯುವ ಎರಡು ಗಂಟೆ ಮೊದಲು ಪರೀಕ್ಷೆಗೆ ಹಾಜರಾಗುವಂತೆ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.