ಬೆಳಗಾವಿ: ಶೈಕ್ಷಣಿಕ ಜಿಲ್ಲೆಯಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಜಿಲ್ಲೆಯ 34 ಕೇಂದ್ರಗಳಲ್ಲಿ 24,194 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಕಲಾ ವಿಭಾಗದಲ್ಲಿ 8,998 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 9,015 ಹಾಗೂ ವಿಜ್ಞಾನ ವಿಭಾಗದಲ್ಲಿ 6,181 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಮಾ.23 ರ ವರೆಗೆ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಗತ್ಯ ಕ್ರಮಕೈಗೊಂಡಿದೆ.
ಪರೀಕ್ಷೆಯಲ್ಲಿ ನಕಲು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಮೇಲ್ವಿಚಾರಣೆಗಾಗಿ ಜಿಲ್ಲಾ ಹಂತದಲ್ಲಿ 1 ಮತ್ತು ತಾಲೂಕಾ ಹಂತದಲ್ಲಿ 5 ವಿಚಕ್ಷಣ ದಳ ನಿಯೋಜಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ. ಖಜಾನೆ ಚಲನವಲನ ಮೇಲೆ ನಿಗಾ ಇರಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಯಂತ್ರಣ ಘಟಕವನ್ನು ತೆರೆಯಲಾಗಿದೆ.