ಬೆಳಗಾವಿ: ಬೆಳಗಾವಿ ಹೊರ ವಲಯದ ಪೀರನವಾಡಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರವು ಮಾಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದ್ದು, ಈ ವಿವಾದವನ್ನು ಶೀಘ್ರವೇ ಇತ್ಯರ್ಥಗೊಳಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ರಾಮದುರ್ಗ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾಪನೆಗೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆಗೆ ಕರೆ ನೀಡಿರುವುದು ನನ್ನ ಗಮನಕ್ಕೆ ಬಂದಿದೆ. ನಾಳೆ ಕರೆ ನೀಡಿರುವ ಪ್ರತಿಭಟನೆ ಹಿಂಪಡೆಯುವಂತೆ ಸಂಘಟನೆಗಳಿಗೆ ಮನವಿ ಮಾಡುತ್ತೇನೆ. ಅಧಿಕಾರಿಗಳ ಸಭೆ ಕರೆದು ಈ ಬಗ್ಗೆ ಚರ್ಚಿಸುತ್ತೇನೆ. ನಾಳೆ ಬೆಳಗ್ಗೆ ವಿವಿಧ ಸಂಘಟನೆಗಳ ಪದಾಧಿಕಾರಿಗಳ ಜತೆಗೂ ಚರ್ಚಿಸುತ್ತೇನೆ ಎಂದರು.
ಕಾನೂನು ಪ್ರಕಾರವಾಗಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಆದಷ್ಟು ಬೇಗ ಸಮಸ್ಯೆ ಬಗೆಹರಿಸುವುದಾಗಿ ಜಾರಕಿಹೊಳಿ ಭರವಸೆ ನೀಡಿದ್ದಾರೆ. ಆ. 29ರಂದು ಪೀರನವಾಡಿಗೆ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಚಿವರು ಬೇಕಾದ್ರೆ ಸ್ಥಳಕ್ಕೆ ಭೇಟಿ ನೀಡಲಿ. ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ನನ್ನ ಕೆಲಸ ಮಾಡುವೆ ಎಂದರು