ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದ ವಿದ್ಯುತ್ ಅವಘಡದಲ್ಲಿ ಒಂದೇ ಕುಟುಂಬದ ನಾಲ್ಕು ಜನ ಮೃತಪಟ್ಟಿರುವುದನ್ನು ಖಂಡಿಸಿ ಗ್ರಾಮಸ್ಥರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿ ತಡೆದ ಗ್ರಾಮಸ್ಥರು ಟೈಯರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕಳೆದೊಂದು ಗಂಟೆಯಿಂದ ಪ್ರತಿಭಟನೆ ನಡೆಸಿದ ಹಿನ್ನೆಲೆ ಕಿ.ಮೀ.ಗಟ್ಟಲೆ ವಾಹನಗಳು ನಿಂತಿದ್ದವು. ಪರಿಣಾಮ ವಾಹನ ಸವಾರರು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.
ವಿದ್ಯುತ್ ಲೈನ್ ದುರಸ್ತಿಗೊಳಿಸದ ಹೆಸ್ಕಾಂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಘೋಷಣೆ ಕೂಗಿದರು. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ದೂರಿದ ಗ್ರಾಮಸ್ಥರು, ಮೃತರ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.