ಬೆಳಗಾವಿ : ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಹೇಳಿಕೆ ಆಧರಿಸಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು ಎಂದು ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಒತ್ತಾಯಿಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಪೊಲೀಸರು ದೂರು ದಾಖಲಿಸಿಕೊಂಡು ತನಿಖೆಯನ್ನು ಸಿಬಿಐಗೆ ವಹಿಸಬೇಕು.
ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿಗೆ ಭೀಮಪ್ಪ ಗಡಾದ್ ಪತ್ರ ಬರೆದಿದ್ದಾರೆ.
ಯಾರೇ ಆಗಲಿ ದೂರು ನೀಡಿದ 24 ಗಂಟೆಯಲ್ಲಿ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಆದ್ರೆ, ದಿನೇಶ್ ಕಲ್ಲಹಳ್ಳಿ ಮಾರ್ಚ್ 2ರಂದು ದೂರು ನೀಡಿದ ಬಳಿಕ ಎಫ್‌ಐಆರ್ ದಾಖಲಿಸಲಿಲ್ಲ. ನಂತರ ಜೀವ ಬೆದರಿಕೆಯಿಂದಲೋ ಇನ್ನಾವುದೋ ಆಮಿಷದಿಂದ ಮಾರ್ಚ್ 6ಕ್ಕೆ ದೂರು ವಾಪಸ್ ಪಡೆದಿದ್ದಾರೆ.
ಈ ನಾಲ್ಕು ದಿನಗಳಲ್ಲಿ ದೂರು ಆಧರಿಸಿ ಎಫ್‌ಐಆರ್ ಏಕೆ ದಾಖಲಿಸಲಿಲ್ಲ?. ಅಷ್ಟೇ ಅಲ್ಲ, ಸಿಡಿಯಲ್ಲಿದ್ದ ಯುವತಿ ಹೇಳಿಕೆ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿಯಿಂದ ಅನ್ಯಾಯವಾಗಿರುವ ಬಗ್ಗೆ ಆಕೆ ಹೇಳಿಕೊಂಡಿದ್ದಾಳೆ.
ಇಷ್ಟಾದರೂ ಪೊಲೀಸರು ರಮೇಶ್ ಜಾರಕಿಹೊಳಿ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿಲ್ಲ. ಇದರ ಜೊತೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಈ ಪ್ರಕರಣವನ್ನು ಗಂಭೀರವಾಗಿ ಪರಗಣಿಸಿಲ್ಲ. ಹೀಗಾಗಿ, ಪ್ರಕರಣ ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂಬ ಅನುಮಾನ ಸಾರ್ವಜನಿಕರಲ್ಲಿದೆ.
ಹೀಗಾಗಿ ಯುವತಿ ಹೇಳಿಕೆ ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಬೇಕು ಎಂದು ಒತ್ತಾಯಿಸಿ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.