ಬೆಳಗಾವಿ: ಜಿಲ್ಲೆಯ ಸುವರ್ಣ ವಿಧಾನಸೌಧದ ಎದುರು ವಿವಿಧ ಸಂಘಟನೆಗಳ ಆಶ್ರಯದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಬೃಹತ್ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿಯಿಂದ ಖಾನಾಪುರ ತಾಲೂಕಿನ ನಂದಗಡ ಗ್ರಾಮದವರೆಗೆ ಬೃಹತ್ ಸಂಕಲ್ಪ ಯಾತ್ರೆಯನ್ನು ಕೈಗೊಂಡ ವಿವಿಧ ಸಂಘಟನೆಗಳು ಮುಂದಿನ ಚಳಿಗಾಲದ ಅಧಿವೇಶನದೊಳಗಾಗಿ ಸುವರ್ಣಸೌಧದ ಎದುರು ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿದರು. ಈ ವೇಳೆ ಮೂಡಲಗಿಯ ಶ್ರೀಮಂತ ಶಿವಯೋಗಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ನಿರ್ದೇಶಕ ಲಖನ್ ಸಂಸುದ್ದಿ, ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ ನೇತೃತ್ವದಲ್ಲಿ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿತ್ತು.
ಮೂಡಲಗಿಯಿಂದ ಬೆಳಗಾವಿ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತಕ್ಕೆ ಆಗಮಿಸಿದ ಕಾರ್ಯಕರ್ತರು ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಳಿಕ ಪೀರನವಾಡಿಯ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಿದರು.
ಇದೇ ವೇಳೆ ಮಾತನಾಡಿದ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಲಖನ್ ಸಂಸುದ್ದಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 145 ಕೋಟಿ ಅನುದಾನ ಘೋಷಣೆಯಾಗಿ ಹಣಕಾಸು ಇಲಾಖೆಯಿಂದ ಅನುಮೋದನೆಗೊಂಡರೂ ಈವರೆಗೂ ನಯಾಪೈಸೆ ಬಿಡುಗಡೆಯಾಗಿಲ್ಲ. ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಇತಿಹಾಸ ಮುಂದಿನ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಕೆಲಸವಾಗಬೇಕು. ಹೀಗಾಗಿ ಕೂಡಲೇ ಅನುದಾನ ಬಿಡುಗಡೆ ಮಾಡಿ ಅಗತ್ಯ ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿದರು.