ಚಿಕ್ಕೋಡಿ : ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಪರಿಶೀಲಿಸಿದರು.
ಸ್ಥಳೀಯ ಅಧಿಕಾರಿಗಳು ಹಾಗೂ ಆರೋಗ್ಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ನಂತರ ಮಾತನಾಡಿದ ಅವರು, ರಾಜ್ಯ ಹಾಗೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಪ್ರತಿ ದಿನ ಹೆಚ್ಚಳವಾಗುತ್ತಿದೆ. ಆದ್ದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮುಂಜಾಗೃತಾ ಕ್ರಮಕೈಗೊಳ್ಳಿ ಎಂದು ವೈದ್ಯರು ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದ ಹಲವು ಕಡೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗುತ್ತಿದೆ. ಇಲ್ಲಿ ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಏನೇ ಪರಿಕರಗಳು ಬೇಕಾದರೂ ತಕ್ಷಣ ನಮಗೆ ಕರೆ ಮಾಡಿ, ನಮ್ಮೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ನಿಮಗೆ ಎಲ್ಲ ರೀತಿಯ ಸಹಾಯ, ಸಹಕಾರ ನೀಡಲಾಗುತ್ತದೆ ಎಂದು ತಿಳಿಸಿದರು.
ಯಾವುದೇ ಕಾರಣಕ್ಕೂ ಲಾಕ್ಡೌನ್ ಜಾರಿಗೊಳಿಸಬಾರದು : ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಲಾಕ್ಡೌನ್ ಜಾರಿಗೊಳಿಸಬಾರದು. ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಬೇಕು. ಲಾಕ್ಡೌನ್ ಜಾರಿ ಮಾಡುವುದರಿಂದ ಏನು ಬದಲಾಗುವುದಿಲ್ಲ. ಆದ್ದರಿಂದ, ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು.
ಜನರಿಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕಾಗಿದೆ. ರಾಜ್ಯ ಸರ್ಕಾರಕ್ಕೆ ಮೊದಲಿನಿಂದಲೂ ಕೊರೊನಾ ಬಗ್ಗೆ ಗೊಂದಲವಿದೆ. ಕೋವಿಡ್ ಕುರಿತು ಸರಿಯಾದ ಮಾಹಿತಿ ಇಲ್ಲ. ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಕೋವಿಡ್ ನಿಯಂತ್ರಣ ಮಾಡಬೇಕು ಎಂದು ತಿಳಿಸಿದರು.
ಸಾರಿಗೆ ನೌಕರರ ಮುಷ್ಕರದ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಕರ್ತವ್ಯ. ಅವರ ಮೇಲೆ ಒತ್ತಡ ಹೇರುವುದು, ಕೆಲಸದಿಂದ ತೆಗೆದು ಹಾಕುವುದು, ಬೆದರಿಸುವುದು ಮಾಡಬಾರದು. ಸಾರಿಗೆ ನೌಕರರ ಮುಖಂಡರನ್ನು ಕರೆದು ಸಭೆ ನಡೆಸಿ ಚರ್ಚೆ ಮಾಡಬೇಕು ಎಂದರು.
ಓದಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ಗೆ ಕೊರೊನಾ ದೃಢ.. ಬೇಗ ಗುಣಮುಖರಾಗಲೆಂದು ಪ್ರಾರ್ಥಿಸಿ ಬೆಂಬಲಿಗರಿಂದ ವಿಶೇಷ ಪೂಜೆ