ಬೆಳಗಾವಿ: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅವರಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿದ ಅವರು, ಡಿಕೆಶಿ ಹಾಗೂ ನಮ್ಮ ನಡುವೆ ಯಾವುದೇ ಜಗಳವಿಲ್ಲ, ಡಿಕೆಶಿ ಜತೆಗೆ ಉತ್ತಮ ಸಂಬಂಧ ಹೊಂದಿದ್ದೇನೆ ಎಂದ್ರು. ಕಾಂಗ್ರೆಸ್, ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷದಲ್ಲಿ ಗುಂಪುಗಾರಿಕೆ ಇದೆ. ವೈಯುಕ್ತಿಕ ವಿಚಾರ ಬಂದಾಗ ಗುಂಪುಗಾರಿಕೆ ಸಹಜ. ಪಕ್ಷದ ವಿಚಾರ ಬಂದಾಗ ನಾವೆಲ್ಲ ಒಂದೇ. ಕೆಪಿಸಿಸಿ ಪುನಾರಚನೆ ಶೀಘ್ರದಲ್ಲಿ ನಡೆಯಲಿದೆ. ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ವೈಮನಸ್ಸು ಬಗ್ಗೆ ಮೊದಲಿನಿಂದ ಮಾತುಗಳು ಕೇಳಿ ಬರುತ್ತಿವೆ ಎಂದರು.
ಪಕ್ಷ ನಮ್ಮ ಮೇಲೆ ನಂಬಿಕೆಯಿಟ್ಟು ಹೆಚ್ಚಿನ ಜವಾಬ್ದಾರಿ ನೀಡಿದೆ. ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರಿಗೆ ಧನ್ಯವಾದ ತಿಳಿಸುತ್ತೇನೆ. ವಿಧಾನಸಭೆ ಚುನಾವಣೆಗೆ 3 ವರ್ಷಗಳ ಕಾಲಾವಕಾಶವಿದೆ. ಕೆಪಿಸಿಸಿ ಅಧ್ಯಕ್ಷರಾಗಲು ಮೊದಲಿನಿಂದಲೂ ಡಿ.ಕೆ. ಶಿವಕುಮಾರ್ ಉತ್ಸುಕರಿದ್ದರು. ಅವರ ಆಸೆಯನ್ನು ಹೈಕಮಾಂಡ್ ಈಡೇರಿಸಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತೇವೆ. ಕೆಪಿಸಿಸಿ ಅಧ್ಯಕ್ಷರಿಗೆ ಮೂರು ಜನ ಕಾರ್ಯಾಧ್ಯಕ್ಷರಿಂದ ಸಂಪೂರ್ಣ ಸಹಕಾರ ಹಾಗೂ ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗುವುದು. ಎಸ್ಟಿ ಸಮುದಾಯಕ್ಕೆ ಇನ್ನೊಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ಕೊಡಬೇಕು. ಈ ಬಗ್ಗೆ ನಾನು ಪಕ್ಷದ ಮುಖಂಡರಿಗೆ ಒತ್ತಾಯಿಸುತ್ತೇನೆ ಎಂದು ಜಾರಕಿಹೊಳಿ ತಿಳಿಸಿದರು.