ಬೆಳಗಾವಿ: ಉಪಚುನಾವಣೆಯಲ್ಲಿ ಪಕ್ಷ ಬಯಸಿದರೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಸಿದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಕೆಟ್ ಕೊಡಿ ಎಂದು ನಾನೇನು ಅರ್ಜಿ ಹಾಕಿಲ್ಲ. ಆದರೆ ಅಭ್ಯರ್ಥಿ ಆಯ್ಕೆ ಸಂಬಂಧ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ನನಗೆ ಸ್ಪರ್ಧೆ ಮಾಡುವಂತೆ ಕೆಲವರು ಒತ್ತಾಯಿಸಿದ್ದಾರೆ. ನನ್ನ ಸಹಿತ ಎಂಟು ಜನರು ಆಸಕ್ತರಿದ್ದಾರೆ. ನೀನೇ ಸ್ಪರ್ಧಿಸಬೇಕು ಎಂದು ಪಕ್ಷ ನನಗೆ ಹೇಳಿದರೆ ಸ್ಪರ್ಧೆಗೆ ನಾನು ಸಿದ್ಧನಿದ್ದೇನೆ ಎಂದರು.
ಅಭ್ಯರ್ಥಿ ಆಯ್ಕೆ ಸಂಬಂಧ ಮುಂದಿನ ವಾರ ಮತ್ತೊಂದು ಸಭೆ ನಡೆಸುತ್ತೇವೆ. ಸಭೆಯಲ್ಲಿ ಜಿಲ್ಲಾ ನಾಯಕರ ಅಭಿಪ್ರಾಯ ಸಂಗ್ರಹಿಸುತ್ತೇವೆ. ಬಳಿಕ ಆಕಾಂಕ್ಷಿಗಳ ಹೆಸರನ್ನು ಕೆಪಿಸಿಸಿಗೆ ಕಳುಹಿಸಿಕೊಡಲಾಗುತ್ತದೆ. ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ನಾನು ಅದಕ್ಕೆ ಬದ್ಧನಾಗಿದ್ದೇನೆ ಎಂದರು.