ಬೆಳಗಾವಿ: ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಬಿಜೆಪಿಯಲ್ಲಿ ಆಂತರಿಕ ತಿಕ್ಕಾಟ ನಡೆಯುತ್ತಿದ್ದು, ರಾಜ್ಯದ ಅಭಿವೃದ್ಧಿಯನ್ನೇ ಸರ್ಕಾರ ಮರೆತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
ಗೋಕಾಕ್ನ ಹಿಲ್ ಗಾರ್ಡನ್ ಗೃಹ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಚಿವ ಸ್ಥಾನ, ಮಂತ್ರಿ ಸ್ಥಾನಕ್ಕಾಗಿ ತಿಕ್ಕಾಟ ನಡೆದಿದೆ. ರಾಜ್ಯದ ಹಿತದೃಷ್ಟಿಯಿಂದ ಬಿಜೆಪಿ ಪಕ್ಷದಲ್ಲಿನ ತಿಕ್ಕಾಟವನ್ನು ಬದಿಗಿಟ್ಟು ಅಭಿವೃದ್ಧಿ ಕೆಲಸಗಳತ್ತ ಗಮನ ಕೊಡಬೇಕು ಎಂದರು.
ಬೆಂಗಳೂರಿನಲ್ಲಿ ನಡೆಯುವ ಕಾಂಗ್ರೆಸ್ ನಾಯಕರ ಸಭೆಯ ಬಗ್ಗೆ ಪ್ರತಿಕ್ರಿಯಿಸಿ, ಸೋಮವಾರ ನಡೆಯುವ ಕೈ ನಾಯಕರ ಸಭೆಯಲ್ಲಿ ಭಾಗವಹಿಸುತ್ತೇವೆ. ಮುಂಬರುವ ಬೆಳಗಾವಿ ಲೋಕಸಭೆ, ಮಸ್ಕಿ ಹಾಗೂ ಬಸವಕಲ್ಯಾಣ ಉಪಚುನಾವಣೆ ಸೇರಿದಂತೆ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದು ತಿಳಿಸಿದರು.
ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಡಿ.6ರಂದು ಮರಾಠಾ ಸಮಾಜದ ರುದ್ರಭೂಮಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನವನ್ನು ಆಚರಿಸಲಾಗುತ್ತಿದೆ. ಅದೇ ದಿನದಂದು ಸ್ಮಶಾನ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಹೇಳಿದರು. ಇದೇ ವೇಳೆ ಹೊನಗಾ ಗ್ರಾಮದ ನೂರಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಇದನ್ನೂ ಓದಿ: ಕರ್ನಾಟಕ ಬಂದ್ಗೆ ಕಾಂಗ್ರೆಸ್ ಬೆಂಬಲ ಇಲ್ಲ: ಸತೀಶ್ ಜಾರಕಿಹೊಳಿ