ಬೆಳಗಾವಿ: ಎರಡನೇ ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಯಲಿರುವ ಚಿಕ್ಕೋಡಿ ಮತ್ತು ರಾಯಬಾಗ ತಾಲ್ಲೂಕುಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಮಸ್ಟರಿಂಗ್, ಮತ ಎಣಿಕೆ ಕೇಂದ್ರ ಹಾಗೂ ಸ್ಟ್ರಾಂಗ್ ರೂಮ್ ಸೇರಿದಂತೆ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಿದರು.
ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯುವಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಮತದಾನದ ಬಳಿಕ ಮತ ಎಣಿಕೆ ಕೇಂದ್ರಗಳಿಗೆ ಅಗತ್ಯ ಭದ್ರತೆ ಕಲ್ಪಿಸುವುದೂ ಸೇರಿದಂತೆ ಮತ ಎಣಿಕೆಗೆ ಅಗತ್ಯವಿರುವ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹಿರೇಮಠ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಡಿ.27 ರಂದು ಎರಡನೇ ಹಂತದ ಮತದಾನ:
ಗ್ರಾಮ ಪಂಚಾಯತಿ ಚುನಾವಣೆಗೆ ಎರಡನೇ ಹಂತದಲ್ಲಿ ಡಿ.27 ರಂದು ಏಳು ತಾಲ್ಲೂಕುಗಳಲ್ಲಿ ಮತದಾನ ನಡೆಯಲಿದ್ದು, ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ. ಎರಡನೇ ಹಂತದಲ್ಲಿ ಚಿಕ್ಕೋಡಿ, ರಾಯಬಾಗ, ಅಥಣಿ, ಕಾಗವಾಡ, ನಿಪ್ಪಾಣಿ, ರಾಮದುರ್ಗ ಮತ್ತು ಸವದತ್ತಿ ತಾಲ್ಲೂಕುಗಳಲ್ಲಿ ಮತದಾನ ನಡೆಯಲಿದೆ. ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಡಿಸಿ ತಿಳಿಸಿದರು.
1,789 ಮತಗಟ್ಟೆಗಳು ಸ್ಥಾಪನೆ:
ಏಳು ತಾಲ್ಲೂಕುಗಳಲ್ಲಿ ನಡೆಯಲಿರುವ ಚುನಾವಣೆಗೆ ಒಟ್ಟು 1,789 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 1,694 ಮತಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಶೇ.10 ರಷ್ಟು ಹೆಚ್ಚುವರಿ ಸೇರಿದಂತೆ ಒಟ್ಟಾರೆ 9,325 ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.