ಬೆಳಗಾವಿ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆದರೂ ಬಡವರಿಗೆ ಒಂದೇ ಒಂದು ಮನೆ ಕಟ್ಟಿಸಿ ಕೊಟ್ಟಿಲ್ಲ ಎಂಬ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ವಿಧಾನಸಭೆಯಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಯಿತು.
ನಿಯಮ 69 ರ ಅಡಿ ನಡೆಯುತ್ತಿದ್ದ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ವ್ಯಾಕ್ಸಿನ್ ಕೊಟ್ಟಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ, ಒಂದು ಮನೆಯನ್ನೂ ಕೊಟ್ಟಿಲ್ಲ. ನಾನು ಸಿಎಂ ಆಗಿದ್ದಾಗ 15 ಲಕ್ಷ ಮನೆ ಮಂಜೂರು ಮಾಡಿದ್ದೇನೆ ಎಂದರು.
ಇದನ್ನೂ ಓದಿ: ಪರಿಷತ್ ಚುನಾವಣೆ: ಗೆದ್ದ ಅಭ್ಯರ್ಥಿಗಳು ಯಾರ‌್ಯಾರು? ಇಲ್ಲಿದೆ ಫುಲ್ ಡೀಟೇಲ್ಸ್!
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶ್ರೀರಾಮುಲು ಮನೆ ಕಟ್ಟಿಸಿಕೊಟ್ಟಿದ್ದೀರಿ. ಆದರೆ, ಹಣ ಬಿಡುಗಡೆ ಆಗಿಲ್ಲ. ನಮ್ಮ ಸರ್ಕಾರ ಬಂದ ಮೇಲೆ 3,000 ಕೋಟಿ ಹಣ ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನೀವು ಮಂಜೂರು ಮಾಡಿರುವ ಮನೆಗಳ ಬಗ್ಗೆ ಆದೇಶ ತೋರಿಸಿ ಎಂದು ಸವಾಲು ಹಾಕಿದರು. ಇದೇ ವೇಳೆ ಮಾತನಾಡಿದ ವಸತಿ ಸಚಿವ ವಿ.ಸೋಮಣ್ಣ, ಸುಳ್ಳು ನೂರು ಸಲ ಹೇಳಿದರೆ ನಿಜ ಆಗುತ್ತೆ. ಸಿದ್ದರಾಮಯ್ಯ ಅವಧಿಯಲ್ಲಿನ 9,76,000 ಮನೆಗಳ ಪೈಕಿ 6000 ಮನೆಗಳು ಬಿಜೆಪಿ ಅವಧಿಯಲ್ಲಿ ಮಂಜೂರಾಗಿದ್ದು. ಇದೀಗ ನಮ್ಮ ಸರ್ಕಾರದ ಅವಧಿಯಲ್ಲಿ ಮನೆ ನಿರ್ಮಾಣಕ್ಕೆ 4,467 ಕೋಟಿ ಬಿಡುಗಡೆ ಮಾಡಿದ್ದೇವೆ. 2,70,000 ಮನೆಗಳನ್ನು ನಿರ್ಮಾಣ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು. ಈ ವೇಳೆ ಪ್ರತಿಪಕ್ಷ ಹಾಗೂ ಆಡಳಿತ ಪಕ್ಷ ನಡುವೆ ಜಟಾಪಟಿ ನಡೆಯಿತು.