ಬೆಳಗಾವಿ: ಕರೊನಾ ವೈರಸ್ ಕುರಿತಂತೆ ಸುಳ್ಳು ಸುದ್ದಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಯಾರೂ ರವಾನಿಸಬೇಡಿ. ಹಾಗೇ ಸೋಷಿಯಲ್ ಮೀಯಾ ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ್ ಹೇಳಿದರು.
ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ವೈರಸ್ ಚಿಕಿತ್ಸೆಗೆ ಪ್ರತ್ಯೇಕ ವಾರ್ಡ್, ಔಷಧಿ ಸೇರಿದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಆಸ್ಪತ್ರೆಯಲ್ಲಿ ಸಾಕಷ್ಟು ನ್ಯೂನತೆಗಳಿವೆ. ಅವುಗಳನ್ನು ವೈದ್ಯರು ಬಗೆಹರಿಸಬೇಕು. ಹಂತ ಹಂತವಾಗಿ ಸುಧಾರಣೆ ಮಾಡಬೇಕು. ಆಸ್ಪತ್ರೆಯ ಇತರ ಸಮಸ್ಯೆಗಳ ಪರಿಹಾರಕ್ಕೆ ನಿರ್ದೇಶಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ಸಿಗುವಂತೆ ಮಾಡಬೇಕು ಎಂದರು.
ಆತ್ಮಸಾಕ್ಷಿಗೆ ಅನುಗುಣವಾಗಿ ವೈದ್ಯರು ಕೆಲಸ ನಿರ್ವಹಿಸಬೇಕು. ಹಾಗಾಗಿ ಸರ್ಕಾರ ಕೂಡ ಅವರಿಗೆ ಸಂಬಳ ನೀಡುತ್ತದೆ. ಯಾರು ಸರಿಯಾಗಿ ಕೆಲಸ ಮಾಡುವುದಿಲ್ಲವೋ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ವೈದ್ಯರು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಬೇಕು. ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು.
ತೀವ್ರ ನಿಗಾ ಘಟಕದಲ್ಲಿ ಇಡಲಾಗಿದ್ದ ವಿದೇಶದ ಒಂಭತ್ತು ಜನರಿಗೆ ಕೊರೊನಾ ಬಂದಿಲ್ಲ. ಅವರಲ್ಲಿ ಕೊರೊನಾ ವೈರಸ್ ಕಂಡು ಬರದ ಹಿನ್ನೆಲೆಯಲ್ಲಿ ಮನೆಗೆ ಕಳುಹಿಸಲಾಗಿದೆ. ಜಿಲ್ಲೆಯ ಜನರು ಯಾರೂ ಆತಂಕ ಪಡಬೇಕಿಲ್ಲ ಎಂದರು.