ಬೆಂಗಳೂರು: ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದಲ್ಲಿ ತಳವಾರ ಸಮುದಾಯವನ್ನು ಪ್ರವರ್ಗ 1 ರಿಂದ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಿದ್ದು,ಯಾದಗಿರಿಯ ಕೆಲ ತಾಲೂಕುಗಳಲ್ಲಿ ಪ್ರಮಾಣ ಪತ್ರ ನೀಡುತ್ತಿಲ್ಲ ಎಂಬ ಮಾಹಿತಿ ಇದ್ದು, ಕೂಡಲೇ ಸಂಬಂಧಿಸಿದ್ದ ಅಧಿಕಾರಿಗಳಿಗೆ ಸೂಚಿಸಿ ಸಮಸ್ಯೆ ಸರಿಪಡಿಸಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ವಿಧಾನ ಪರಿಷತ್ ಶೂನ್ಯವೇಳೆಯಲ್ಲಿ ಬಿಜೆಪಿ ಸದಸ್ಯ ತಳವಾರ್ ಸಾಬಣ್ಣ ಮಾತನಾಡಿ, ಹಿಂದೂ ತಳವಾರ್ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಕೇಂದ್ರ ಮತ್ತು ರಾಜ್ಯ ಎರಡೂ ಸೇರಿಸಿದೆ. ಆದರೆ ರಾಜ್ಯದ ಯಾದಗಿರಿಯ ಕೆಲವೆಡೆ ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣಪತ್ರ ನೀಡುತ್ತಿಲ್ಲ ಎಂದು ಆರೋಪಿಸಿದರು.
ಪ್ರಮಾಣಪತ್ರ ಕೇಳಿದರೆ ದೌರ್ಜನ್ಯ ನಡೆಸಿದ್ದಾರೆ. ನಮ್ಮ ಹೋರಾಟಗಾರರ ಮೇಲೆ ಹಲ್ಲೆ ನಡೆಸಲಾಗಿದ್ದು, ಇದು ಖಂಡನೀಯ. ಮುಖ್ಯಮಂತ್ರಿಗಳು ಎಸ್ಟಿಗೆ ಸೇರಿಸಿ ಪ್ರಮಾಣಪತ್ರ ನೀಡುವಂತೆ ಘೋಷಿಸಿದ್ದರೂ ಕೆಲ ಅಧಿಕಾರಿಗಳು ಪ್ರಮಾಣಪತ್ರ ನೀಡುತ್ತಿಲ್ಲ. ಕೂಡಲೇ ಇದನ್ನು ಸರಿಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ತಳವಾರ ಪರಿವಾರ ಈವರೆಗೂ ಪ್ರವರ್ಗ 1 ರಲ್ಲಿ ಇತ್ತು. ಅದನ್ನು ಕೇಂದ್ರದ ಆದೇಶದ ಮೇಲೆ ಪ.ಪಂಗೆ ಸೇರಿಸಿ ಆದೇಶಿಸಲಾಗಿದೆ.
ರಾಜ್ಯದ ಎಲ್ಲ 30 ಜಿಲ್ಲೆಗಳಿಗೆ ಮಾರ್ಗಸೂಚಿ ಕಳಿಸಿದ್ದಾರೆ. ಯಾದಗಿರಿ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಸಮಸ್ಯೆ ಇದೆ ಎಂದು ಸದಸ್ಯರು ಹೇಳುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು,ಮತ್ತೆ ಈ ರೀತಿ ಆಗದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಎಸ್ಸಿ ಎಸ್ಟಿಗೆ ವಿದ್ಯಾರ್ಥಿ ವೇತನ ನಿಲ್ಲಿಸಿಲ್ಲ: ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಗಳ ಎಸ್ಸಿಎಸ್ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನಿಲ್ಲಿಸಿಲ್ಲ, ಒಬಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವಲ್ಲಿ ಸ್ವಲ್ಪ ತೊಂದರೆಯಾಗಿತ್ತು. ಈಗ ಅದನ್ನೂ ಸರಿಪಡಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸದನಕ್ಕೆ ತಿಳಿಸಿದರು.
ವಿಧಾನ ಪರಿಷತ್ ಶೂನ್ಯವೇಳೆಯಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, 1-8 ನೇ ತರಗತಿ ವರೆಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಸಹಭಾಗಿತ್ವ ಇಲ್ಲ. ರಾಜ್ಯ ಸರ್ಕಾರವೇ ವಿದ್ಯಾರ್ಥಿ ವೇತನ ಮುಂದುವರೆಸಿದೆ.
ಆದರೆ 8ನೇ ತರಗತಿ ನಂತರ ಕೇಂದ್ರದ ಸಹಭಾಗಿತ್ವದಲ್ಲಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಇದನ್ನೂ ಮುಂದುವರೆಸಲಾಗುತ್ತಿದೆ. ಆದರೆ ಒಬಿಸಿ ವಿದ್ಯಾರ್ಥಿಗಳಿಗೆ ಮಾತ್ರ ತೊಂದರೆಯಾಗಿತ್ತು. ಅದನ್ನು ಈಗ ಸರಿಪಡಿಸಿ ಮತ್ತೆ ವಿದ್ಯಾರ್ಥಿ ವೇತನ ಕೊಡುವ ಕೆಲಸ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.
ಇದನ್ನೂಓದಿ:ಕೋವಿಡ್ ಹೆಚ್ಚಳ ಭೀತಿ: ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಧರಿಸಲು ಸಚಿವ ಕೆ ಸುಧಾಕರ್ ಸಲಹೆ