ಬೆಳಗಾವಿ: ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಸ್ಮಾರ್ಟ್ ಸಿಟಿ ಯೋಜನೆಯನ್ನು ನಗರದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಪ್ರಯತ್ನ ನಡೆಸಲಾಗ್ತಿದೆ. ಒಳ್ಳೆಯ ರೀತಿಯಲ್ಲಿ ಯೋಜನೆ ನಡೆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಉತ್ತಮ ಹೆಸರು ಬರುತ್ತದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅಭಿಪ್ರಾಯಪಟ್ಟರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಅಂಗಡಿ, ಸ್ಮಾರ್ಟ್ ಸಿಟಿ ಕಾಮಗಾರಿ ಉತ್ತಮ ರೀತಿಯಲ್ಲಿ ಸಾಗಿದರೆ ಕೇಂದ್ರ ಸರ್ಕಾರಕ್ಕೆ ಮತ್ತು ಪ್ರಧಾನಿ ಮೋದಿ ಅವರಿಗೆ ಒಳ್ಳೆಯ ಹೆಸರು ಬರುತ್ತದೆ. ಹಿಂದಿನ ಅವಧಿಯಲ್ಲಿ ಹಳೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿಲ್ಲ. ಈ ಬಾರಿ ಎರಡು ಕಡೆಗೆ ನಮ್ಮದೇ ಸರ್ಕಾರ ಇದ್ದು, ನಾನೇ ಅದರ ಜವಾಬ್ದಾರಿ ತೆಗೆದುಕೊಂಡು ಉತ್ತಮ ರೀತಿಯಲ್ಲಿ ಕೆಲಸ ಮಾಡಿಸುತ್ತೇನೆ ಎಂದರು.
ಕಿತ್ತೂರು ಕರ್ನಾಟಕ ಮರುನಾಮಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಸವಣ್ಣನವರು ಪ್ರಜಾಪ್ರಭುತ್ವವನ್ನು ಸಾರಿದ ನೆನಪಿಗಾಗಿ ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಘೋಷಿಸಲಾಗಿದೆ. ಈ ಭಾಗದ ಜನರು ಮತ್ತು ಜನಪ್ರತಿನಿಧಿಗಳ ಅಭಿಪ್ರಾಯದ ಮೇರೆಗೆ ಮುಂಬೈ ಕರ್ನಾಟಕದ ಮರು ನಾಮಕರಣದ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಲಿದೆ ಎಂದು ತಿಳಿಸಿದರು.