ಬೆಳಗಾವಿ: ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳ ಜೊತೆಗೆ ದುರ್ವರ್ತನೆ ತೋರುವ ಚಾಲಕ ಹಾಗೂ ನಿರ್ವಾಹಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮನ್ ಸವದಿ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಸಂಸ್ಥೆಗೆ ಕೆಟ್ಟ ಹೆಸರು ತರುವ ರೀತಿಯಲ್ಲಿ ವರ್ತಿಸುವ ಚಾಲಕರು ಹಾಗೂ ನಿರ್ವಾಹಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳನ್ನು ಪ್ರೀತಿಯಿಂದ ಕಾಣಬೇಕು. ಗುಣಮಟ್ಟದ ಸೇವೆ ನೀಡುವ ನಿಟ್ಟಿನಲ್ಲಿ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಖಾನಾಪುರ ತಾಲೂಕಿನಲ್ಲಿ ವಿದ್ಯಾರ್ಥಿಗಳ ಮೇಲೆ ಬಸ್ ನುಗ್ಗಿಸಿದ ಘಟನೆಯನ್ನು ಗಮನಿಸಿದ್ದೇನೆ. ತಕ್ಷಣವೇ ಚಾಲಕನನ್ನು ಅಮಾನತು ಮಾಡಲಾಗಿದೆ. ಈ ರೀತಿ ಬೇಜವಾಬ್ದಾರಿ ತೋರಿದರೆ, ಇನ್ಮುಂದೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಹಾರಾಷ್ಟ್ರಕ್ಕೆ ಇಂದು ಡಿಸಿಎಂ
ಡಿಸಿಎಂ, ಸಾರಿಗೆ ಇಲಾಖೆಯ ಜೊತೆಗೆ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಉಸ್ತುವಾರಿ ವಹಿಸಿಕೊಂಡಿರುವ ಲಕ್ಷ್ಮಣ್ ಸವದಿ ಅವರು ಇಂದು ಮಹರಾಷ್ಟ್ರದ ಸಾಂಗ್ಲಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಗಡಿ ಭಾಗದಲ್ಲಿರುವ ಕನ್ನಡ ಭಾಷಿಕ ಮತದಾರರನ್ನು ಸೆಳೆಯುವುದರೊಂದಿಗೆ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲುವಿಗೆ ಯಾವ ರೀತಿ ತಂತ್ರ ರೂಪಿಸಬೇಕು ಎಂದು ಅಲ್ಲಿನ ಬಿಜೆಪಿ ಕಾರ್ಯಕರ್ತರಿಗೆ ಸಲಹೆ ನೀಡಲಿದ್ದಾರೆ. ಅಲ್ಲದೇ, ಉತ್ತರ ಕರ್ನಾಟಕ ಭಾಗದ ಕೆಲ ಬಿಜೆಪಿ ಮುಖಂಡರಿಗೆ ಡಿಸಿಎಂ ಸಭೆಗೆ ಆಹ್ವಾನಿಸಿದ್ದಾರೆ. ಮಹಾರಾಷ್ಟ್ರ-ಕರ್ನಾಟಕ ಬಿಜೆಪಿ ಕಾರ್ಯಕರ್ತರ ಮಧ್ಯೆ ಸಮನ್ವಯತೆ ಮೂಡಿಸಿ, ಮಹಾರಾಷ್ಟ್ರದಲ್ಲಿ ಸ್ವಂತ ಬಲದ ಮೇಲೆ ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಡಿಸಿಎಂ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.