ಬೆಳಗಾವಿ: ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಇಡೀ ದೇಶವೇ ಲಾಕ್ಡೌನ್ ಆಗಿದೆ. ಇಂತಹ ಸಂದರ್ಭದಲ್ಲಿ ಮನೆಯಲ್ಲಿರುವುದು ಬಿಟ್ಟು ಅನಗತ್ಯವಾಗಿ ರಸ್ತೆಗಿಳಿದರೆ ಕಠಿಣ ಕಾನೂನು ಕ್ರಮ ಜರಗಿಸಲಾಗುವುದು ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಖಡಕ್ ಎಚ್ಚರಿಕೆ ನೀಡಿದರು.
ನಗರದಲ್ಲಿ ಮಾತನಾಡಿದ ಅವರು, ಲಾಕ್ಡೌನ್ ನಿಯಮ ಉಲ್ಲಂಘಿಸಿ ರೋಡಿಗಿಳಿಯುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮವಾಗಲಿದೆ. ಸದ್ಯ ಕೋರ್ಟ್ಗಳು ಬಂದ್ ಇರುವ ಕಾರಣ ನಿಯಮ ಉಲ್ಲಂಘಿಸುವವರು ಬೆಲೆ ತೆರಬೇಕಾಗುತ್ತದೆ ಎಂದರು.
ಹಲವೆಡೆ ವೈದ್ಯಕೀಯ ಸಂಶೋಧನೆ ನಡೆಯುತ್ತಿದ್ದರೂ ಕೊರೊನಾ ತಡೆಯಲು ಔಷಧ ಕಂಡುಹಿಡಿಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೊರೊನಾ ನಿಯಂತ್ರಿಸಲು ಸಾಮಾಜಿಕ ಅಂತರ ಅತ್ಯವಶ್ಯಕ. ಈ ಕಾರಣಕ್ಕೆ ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಜಾತ್ರೆ, ಹಬ್ಬ, ಸಂಚಾರ ಮಾಡದೇ ಇದ್ದಾಗ ಕೊರೊನಾ ನಿಯಂತ್ರಿಸಬಹುದು. ಈ ಕಾರಣಕ್ಕಾಗಿ ಬಸ್, ರೈಲು, ಆಟೋ, ವಿಮಾನ ಸೇವೆ ರದ್ದುಗೊಳಿಸಲಾಗಿದೆ. ಹೀಗಾಗಿ ಕೇಂದ್ರ ಸರ್ಕಾರದ ಆದೇಶವನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಅಗತ್ಯ ವಸ್ತುಗಳ ಕೊರತೆ ಆಗದಂತೆ ಕ್ರಮ ವಹಿಸಲಾಗಿದೆ. ಹಾಲು, ತರಕಾರಿ, ದಿನಸಿ ಲಭ್ಯತೆ ಇದೆ. ಹೀಗಾಗಿ ಅಗತ್ಯಕ್ಕಿಂತ ಹೆಚ್ಚು ವಸ್ತುಗಳನ್ನು ಯಾರೂ ಖರೀದಿಸಬಾರದು. ಖರೀದಿ ವೇಳೆ ಸಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದರು.