ಬೆಳಗಾವಿ: ಮಲಪ್ರಭಾ, ಘಟಪ್ರಭಾ ನದಿ ತೀರದ ಒತ್ತುವರಿ ಪ್ರವಾಹಕ್ಕೆ ಕಾರಣವಾಗಿದೆ. ಆದ್ದರಿಂದ ನದಿ ತೀರದ ಒತ್ತುವರಿ ಕುರಿತು ಸಮಗ್ರ ಸಮೀಕ್ಷೆ ಕೈಗೊಂಡು ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸಮಸ್ಯೆ ನಿವಾರಣೆಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.
ಮಲಪ್ರಭಾ ಹಾಗೂ ಘಟಪ್ರಭಾ ನದಿಗಳ ಒತ್ತುವರಿ ಕುರಿತು ಸುವರ್ಣ ವಿಧಾನಸೌಧದಲ್ಲಿ ಶನಿವಾರ ನಡೆದ ಜಲಸಂಪನ್ಮೂಲ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಸಂಬಂಧಿಸಿದ ಜಿಲ್ಲಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವಾಹಕ್ಕೆ ಪ್ರಮುಖ ಕಾರಣ ನದಿ ತೀರದ ಒತ್ತುವರಿ, ನದಿಗಳು ಸರಾಗವಾಗಿ ಹರಿಯಲು ಅವಕಾಶ ನೀಡಬೇಕಿದೆ. ಆದ್ದರಿಂದ ಮೊದಲು ಸಮೀಕ್ಷೆ ಆಗಲಿ ನಂತರ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಮೀಕ್ಷೆ ಬಳಿಕ ಜನಪ್ರತಿನಿಧಿಗಳ ಸಭೆ:
ನದಿ ತೀರಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಶಾಶ್ವತ ಯೋಜನೆ ರೂಪಿಸಿ ಸರ್ಕಾರದಿಂದ ಅಗತ್ಯ ಹಣಕಾಸಿನ ನೆರವು ಪಡೆದುಕೊಳ್ಳಲಾಗುವುದು. ಸಮೀಕ್ಷೆ ಬಳಿಕ ಸಂಬಂಧಿಸಿದ ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಿ, ಸಮಗ್ರ ಚರ್ಚೆ ಮಾಡಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದರು.
ಸಚಿವರ ಸಭೆ ಬಳಿಕ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಹಾಗೂ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರ ನೇತೃತ್ವದಲ್ಲಿ ಕಂದಾಯ, ನೀರಾವರಿ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಯಿತು.
ನದಿಪಾತ್ರದ ಒತ್ತುವರಿಯ ವೈಜ್ಞಾನಿಕ ಸಮೀಕ್ಷೆ ಹಾಗೂ ಒತ್ತುವರಿ ತೆರವಿಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಈ ವೇಳೆ ನೀರಾವರಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಬಳಸಿಕೊಂಡು ಸಮಗ್ರ ಸಮೀಕ್ಷೆ ನಡೆಸಿ ವರದಿ ರೂಪಿಸಬೇಕಿದೆ ಎಂದು ಬಿಸ್ವಾಸ್ ಸೂಚಿಸಿದರು.