ಬೆಳಗಾವಿ: ಬೋರ್‍ವೆಲ್‍ನಲ್ಲಿ ನೀರು ಬರುತ್ತಿದ್ದರೂ ಗ್ರಾಮಗಳಿಗೆ ಟ್ಯಾಂಕರ್ ಬಿಟ್ಟು ಸರ್ಕಾರದ ಹಣ ಲೂಟಿ ಹೊಡೆಯಲು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಕಿತ್ತೂರು ತಹಶೀಲ್ದಾರ್ ಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದರು.
ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಬೋರ್‍ವೆಲ್‍ಗಳಲ್ಲಿ ನೀರು ಬರುತ್ತಿದೆ. ಆದರೆ ಎಂ.ಕೆ.ಹುಬ್ಬಳ್ಳಿಗೆ ಪಂಚಾಯಿತಿ ಅಧಿಕಾರಿಗಳು ಟ್ಯಾಂಕರ್ ಮೂಲಕ ನೀರು ಹರಿಸುತ್ತಿದ್ದಾರೆ. ಆ ಮೂಲಕ ಸರ್ಕಾರದ ಹಣವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇಂಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ತಹಶೀಲ್ದಾರ್ ಅವರನ್ನು ಆಗ್ರಹಿಸಿದರು.
ನಿನ್ನೆ ಮಧ್ಯಾಹ್ನ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದ ಪಂಚಾಯಿತಿ ಅಧಿಕಾರಿಗಳನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದರು. ಟ್ಯಾಂಕರ್ ಮೂಲಕ ನೀರು ಪೂರೈಕೆ ಸ್ಥಗಿತಗೊಳಿಸಿ, ಬೋರ್‍ವೆಲ್ ಮೂಲಕ ನೀರು ಸರಬರಾಜು ಮಾಡುವಂತೆಯೂ ಒತ್ತಾಯಿಸಿದರು. ಇಂದು ತಹಶೀಲ್ದಾರ್ ಬಳಿ ಪಂಚಾಯಿತಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.