ಅಥಣಿ: ತಾಲೂಕಿನಲ್ಲಿ ಕೊರೊನಾ ಪಾಸಿಟಿವ್ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಯಲ್ಲಿ ನೂರು ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ.
ಸದ್ಯ ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಗಂಭೀರವಲ್ಲದ ರೋಗಿಗಳಿಗೆ ಆಯಾ ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ತಯಾರಿ ನಡೆಸಿದ್ದು, ಸರ್ಕಾರಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸಾ ಕೇಂದ್ರಗಳಾಗಿ ಮಾರ್ಪಾಡುಗೊಳ್ಳಲಿವೆ.
ಕೋವಿಡ್-19ಗೆ ಶಿವನೂರ, ಸಂಕೋನಟ್ಟಿ, ದರೂರ, ಮತ್ತು ಅಥಣಿ ಪಟ್ಟಣದಲ್ಲಿ ಒಟ್ಟು 5 ಜನ ಸಾವನ್ನಪ್ಪಿದ್ದಾರೆ. ಇದರಿಂದ ಬೆಚ್ಚಿ ಬಿದ್ದ ಜನರು ತಾವೇ ಸ್ವಯಂ ಪ್ರೇರಿತವಾಗಿ ತಮ್ಮ ಏರಿಯಾಗಳನ್ನು ಸೀಲ್ಡೌನ್ ಮಾಡಿಕೊಳ್ಳುತ್ತಿದ್ದು, ಸದ್ಯ ತಾಲೂಕು ಆಸ್ಪತ್ರೆಯಲ್ಲಿಯೂ ಆಕ್ಸಿಜನ್ ಮತ್ತು ವೆಂಟಿಲೇಟರ್ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ. ಅಥಣಿ ಆಸ್ಪತ್ರೆಯ ಸರ್ಕಾರಿ ವೈದ್ಯರು ಮತ್ತು ಸಿಬ್ಬಂದಿ ಹೊರತಾಗಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ತಮ್ಮ ಖಾಸಗಿ ಆಸ್ಪತ್ರೆಗಳನ್ನು ಕೂಡ ಬಂದ್ ಮಾಡಿರುವುದರಿಂದ ಮುಂದಿನ ದಿನಗಳಲ್ಲಿ ಚಿಕಿತ್ಸೆಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಥಣಿ ತಾಲೂಕು ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಆಕ್ಸಿಜನ್ ಕಿಟ್ ಗಳು ಮತ್ತು ವೆಂಟಿಲೇಟರ್ ಗಳು ಲಭ್ಯವಾಗುವಂತೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.