ಬೆಳಗಾವಿ: ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಆರ್ಟ್ ಆಫ್ ಲಿವಿಂಗ್ ಜತೆಗೂಡಿ ಜಿಲ್ಲೆಯಲ್ಲಿ ಅಂತರ್ಜಲ ಚೈತನ್ಯ ಹೆಚ್ಚಿಸಿ ರಾಜ್ಯಕ್ಕೆ ಮಾದರಿಯಾಗಿ ಮಾಡಬಹುದು. ಈ ನಿಟ್ಟಿನಲ್ಲಿ ಯೋಜನೆ ರೂಪಿಸುವಂತೆ ಸಚಿವ ಕೆ.ಎಸ್. ಈಶ್ವರಪ್ಪ ಸಲಹೆ ನೀಡಿದರು.
ಪ್ರವಾಸಿಮಂದಿರದಲ್ಲಿ ಅಂತರ್ಜಲ ಚೈತನ್ಯ ಹಾಗೂ ನರೇಗಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನೀರಾವರಿ ಹಾಗೂ ಕಬ್ಬು ಬೆಳೆ ಹೆಚ್ಚಾಗಿರುವ ತಾಲೂಕುಗಳನ್ನು ಹೊರತುಪಡಿಸಿ ಇತರ ಕಡೆಗಳಲ್ಲಿ ಅಂತರ್ಜಲ ವೃದ್ಧಿಗೆ ಆದ್ಯತೆ ನೀಡಬೇಕು. ಜಿಲ್ಲಾಧಿಕಾರಿಗಳ ಜತೆ ಸಮನ್ವಯತೆ ಸಾಧಿಸುವ ಮೂಲಕ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ಶೀಘ್ರವೇ ಭೂಮಿ ಪಡೆದುಕೊಳ್ಳಬೇಕು ಎಂದರು.
ನರೇಗಾ ಯೋಜನೆ ಅನುಷ್ಠಾನದ ಕುರಿತು ಸಚಿವರಿಗೆ ಮಾಹಿತಿ ನೀಡಿದ ಜಿ. ಪಂ ಸಿಇಒ ಡಾ. ರಾಜೇಂದ್ರ ಕೆ.ವಿ, ಜಿಲ್ಲೆಗೆ ಒಟ್ಟು 1.20 ಕೋಟಿ ಮಾನವ ದಿನಗಳ ಸೃಜನೆಯ ಗುರಿ ನೀಡಲಾಗಿತ್ತು. ಇದುವರೆಗೆ ಶೇ 42ರಷ್ಟು ಗುರಿ ಸಾಧಿಸಲಾಗಿದೆ. ಕೊರೊನಾದಿಂದ ಸ್ವಲ್ಪಮಟ್ಟಿಗೆ ನಿಧಾನವಾಗಿ ಕಾಮಗಾರಿ ಆರಂಭಗೊಂಡಿದ್ದು, ಇದೀಗ ಚುರುಕುಗೊಂಡಿದೆ ಎಂದು ವಿವರಿಸಿದರು.
ಜಿಲ್ಲೆಯಲ್ಲಿ ಇದುವರೆಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಪರಿಸ್ಥಿತಿ ಬಂದಿಲ್ಲ. ಸ್ವಚ್ಛ ಭಾರತ ಮಿಷನ್, ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಸೇರಿದಂತೆ ಬಹುತೇಕ ಕೆಲಸಗಳು ಇದೀಗ ಚುರುಕು ಪಡೆದುಕೊಂಡಿವೆ ಎಂದು ತಿಳಿಸಿದರು.