ಬೆಳಗಾವಿ: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಬೆಳಗಾವಿಯ ಎರಡು ಪ್ರಮುಖ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡದಲ್ಲಿರುವ ರೇಣುಕಾ ದೇವಿ, ಜೋಗುಳಬಾವಿ ಹಾಗೂ ರಾಯಭಾಗದ ಚಿಂಚಲಿ ಮಾಯಕ್ಕ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಮುಂದಿನ ಆದೇಶದವರೆಗೆ ದೇವಸ್ಥಾನ ತೆರೆಯದಂತೆ ಡಿಸಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಜಿಲ್ಲೆಯಲ್ಲಿರುವ ಎರಡೂ ದೇವಸ್ಥಾನಗಳಿಗೆ ಮಹಾರಾಷ್ಟ್ರದಿಂದ ಅಧಿಕ ಭಕ್ತರು ಆಗಮಿಸುತ್ತಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚುತ್ತಿರುವ ಕಾರಣ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ಬ್ರೇಕ್ ಹಾಕಲಾಗಿದೆ.
ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದರಿಂದ ಎಚ್ಚೆತ್ತ ಬೆಳಗಾವಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಫೆ. 1ರಂದು ದೇವಸ್ಥಾನ ಆರಂಭವಾಗಿತ್ತು. ನೆರೆ ರಾಜ್ಯದಲ್ಲಿ ಕೊರೊನಾ ಹೆಚ್ಚಿದ ಕಾರಣ ಇದೀಗ ದೇವಸ್ಥಾನ ಮತ್ತೆ ಬಂದ್ ಆಗಿದ್ದು, ಭಕ್ತರಿಗೆ ನಿರಾಸೆ ಮೂಡಿಸಿದೆ.