ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಜಾರಕಿಹೊಳಿ ಕುಟುಂಬದ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅದು ಮಾಧ್ಯಮ ಸೃಷ್ಟಿ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅರಭಾವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವೀರಶೈವ ಲಿಂಗಾಯತ ಸಮುದಾಯ ಸಭೆಯಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸವದಿ ಮತ್ತು ಜೊಲ್ಲೆ ನಡುವೆ ಕೆಲವು ಸಣ್ಣ ಪುಟ್ಟ ವಿಚಾರಕ್ಕೆ ಮನಸ್ತಾಪ ಇರಬಹುದು. ಆದ್ರೆ ಎಲ್ಲವೂ ಸರಿ ಆಗುತ್ತದೆ ಎಂದು ಹೇಳಿದರು.
ಭಾರತೀಯ ಜನತಾ ಪಕ್ಷದಲ್ಲಿ ಮಾತ್ರ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನವನ್ನು ನೀಡುತ್ತಾರೆ. ಇನ್ನುಳಿದ ಯಾವುದೇ ಪಕ್ಷಗಳು ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ಕೊಡುವುದಿಲ್ಲ. ರಾಜ್ಯದಲ್ಲಿ ಲಿಂಗಾಯತ ಮತಗಳು ಹೆಚ್ಚಾಗಿವೆ. ಕಾಂಗ್ರೆಸ್ ಜೆಡಿಎಸ್ ಪಕ್ಷದವರು ಲಿಂಗಾಯತ ಮುಖ್ಯಮಂತ್ರಿ ಆಯ್ಕೆ ಮಾಡಲಿ ನೋಡೋಣ ಎಂದು ಪ್ರತಿಪಕ್ಷಗಳಿಗೆ ಸವಾಲು ಹಾಕಿದರು.
ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯ ಮತಗಳು ವಿಭಜನೆ ಆಗಬಾರದು. ಎಲ್ಲರೂ ಬಿಜೆಪಿಗೆ ಮತ ನೀಡಿ. ಮತ್ತೊಮ್ಮೆ ಸರ್ಕಾರ ಬಂದರೆ ಮೀಸಲಾತಿ ನೀಡಲು ಅನುಕೂಲವಾಗುತ್ತದೆ. ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ನೀಡುವುದು ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಕ್ಕಿಲ್ಲ ಎಂದು ಅಸಮಾಧಾನ ಹೊಂದಿದ್ದಾರೆ. ನಾನು ಮುಖ್ಯಮಂತ್ರಿಯಲ್ಲಿ ಕೇಳಿಕೊಳ್ಳುತ್ತೇನೆ. ಆದಷ್ಟು ಶೀಘ್ರ ಮೀಸಲಾತಿ ನೀಡುವಂತೆ ಮನವಿ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಬರುವ ಚುನಾವಣೆಯಲ್ಲಿ ಸಮಾಜದ ಬಾಂಧವರು ಒಂದಾಗಿ ಒಗ್ಗಟ್ಟಿನಿಂದ ಮತಗಳು ಬೇರೆ ಪಕ್ಷಗಳಿಗೆ ಹೋಗದಂತೆ ನೋಡಿಕೊಂಡು ಬಿಜೆಪಿಗೆ ಮತ ನೀಡಿದರೇ ನಿಮ್ಮ ಸಮುದಾಯದವರೊಬ್ಬರು ಮುಖ್ಯಮಂತ್ರಿಯಾಗುವ ಅವಕಾಶವು ಮತ್ತೊಮ್ಮೆ ಕೂಡಿ ಬರಲಿದೆ. ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಪ್ರಮುಖವಾಗಿವೆ. ಇದರಲ್ಲಿ ವೀರಶೈವ ಲಿಂಗಾಯತ ಸಮಾಜದವರೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದು ಕೇವಲ ಬಿಜೆಪಿ ಮಾತ್ರ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅತಿ ಬುದ್ಧಿವಂತಿಕೆಯಿಂದ ಎಸ್ಸಿ ಹಾಗೂ ಎಸ್ಟಿಗೆ ಮೀಸಲಾತಿ ಹೆಚ್ಚಿಸಿದ್ದಾರೆ. ಎಲ್ಲರೂ ಮೀಸಲಾತಿ ಹೆಚ್ಚಳ ಸಾಧ್ಯವಿಲ್ಲ ಎಂದು ಹೇಳುತ್ತಿದ್ದರು. ಆದರೆ ಮೀಸಲಾತಿ ಹೆಚ್ಚಿಸಿ ತಮ್ಮ ಆಡಳಿತ ವೈಖರಿಯನ್ನು ತೋರಿದ್ದಾರೆ. ಹಲವು ಸಮುದಾಯಗಳ ಮೀಸಲಾತಿ ಹೆಚ್ಚಿಸಲು ಚಿಂತನೆ ಮಾಡುತ್ತಿದ್ದಾರೆ. ಆದರೆ ಅವರಿಗೆ ಸಮಯ ಅಭಾವ ಆಗುತ್ತಿದೆ. ಎಲ್ಲರಿಗೂ ಮೀಸಲಾತಿ ಸಿಗುತ್ತದೆ. ಆದಷ್ಟು ಬೇಗ ಮೀಸಲಾತಿಗೆ ಆಗ್ರಹಿಸಿ ಸಿಎಂಗೆ ಮನವಿ ಸಲ್ಲಿಸಲಾಗುವುದು ಎಂದರು.
ಇದನ್ನೂ ಓದಿ: ಬಿಜೆಪಿಯ ಭದ್ರಕೋಟೆ ಬೆಂಗಳೂರು ದಕ್ಷಿಣ ಕ್ಷೇತ್ರದ ವಶಕ್ಕೆ ಕಾಂಗ್ರೆಸ್, ಜೆಡಿಎಸ್ ಪ್ರತಿತಂತ್ರ
ತಮಿಳುನಾಡು ಮಾದರಿಯಲ್ಲಿ ಮೀಸಲಾತಿಗೆ ಆಗ್ರಹ: ತಮಿಳುನಾಡು ಮುಖ್ಯಮಂತ್ರಿ ದಿವಂಗತ ಜಯಲಲಿತಾ ರೀತಿಯಲ್ಲಿ 69% ಮೀಸಲಾತಿ ಹೆಚ್ಚಿಸಿ 9ನೇ ಪರಿಚ್ಛೇದಕ್ಕೆ ಸೇರಿಸಿದ ರೀತಿಯಲ್ಲಿ ನಮ್ಮಲ್ಲೂ ಆಗಬೇಕಿದೆ. ದೇಶದಲ್ಲಿ ಅವರು ಒಬ್ಬರೇ ಆ ರೀತಿ ಮೀಸಲಾತಿ ಹೆಚ್ಚಳ ಮಾಡಿ ಸಮಾನವಾಗಿ ಮೀಸಲಾತಿ ಹಂಚಿಕೆ ಮಾಡಿದ್ದಾರೆ. ಅದೇ ರೀತಿಯಲ್ಲಿ ನಮ್ಮ ಸರ್ಕಾರ ಆ ಪ್ರಯತ್ನ ಮಾಡಿದರೆ ಎಲ್ಲರಿಗೂ ಮೀಸಲಾತಿ ಸಿಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ಅಭಿಲಾಷೆ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ತಮಿಳುನಾಡು ಮಾದರಿಯಲ್ಲಿ ನಮ್ಮಲ್ಲೂ ಸರ್ಕಾರ ಮೀಸಲಾತಿ ನೀಡಲಿ: ಬಾಲಚಂದ್ರ ಜಾರಕಿಹೊಳಿ