ಬೆಳಗಾವಿ: ಕೊರೊನಾ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ನೇಕಾರರು, ಹೂವು ಬೆಳೆಗಾರರು, ಆಟೋ ಚಾಲಕರು ಸೇರಿದಂತೆ ಇತರರಿಗೆ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ ಸಹಾಯಧನ ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ಕೊರೊನಾ ಹಿನ್ನೆಲೆಯಲ್ಲಿ ನಗರದ ಪ್ರವಾಸಿಮಂದಿರದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಕ್ರಿಯವಾಗಿರುವ ಪ್ರಕರಣಗಳಿಗೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಹೊರ ರಾಜ್ಯದಿಂದ ಬಂದವರನ್ನು ಮಾತ್ರ ನಿಯಮಾವಳಿ ಪ್ರಕಾರ ಕ್ವಾರಂಟೈನ್ನಲ್ಲಿ ಇರಿಸಬೇಕು ಎಂದು ತಿಳಿಸಿದರು.
ಮುಂಬರುವ ದಿನಗಳಲ್ಲಿ ಹೊರ ರಾಜ್ಯಗಳಿಂದ ಆಗಮಿಸುವವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡುವ ಬದಲು ಹೋಮ್ ಕ್ವಾರಂಟೈನ್ನಲ್ಲಿ ಇರಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಲಾಗುವುದು. ವಿಮಾನದ ಮೂಲಕ ಬಂದವರನ್ನು 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಹಾಗೂ 7 ದಿನಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿ ಇರಿಸಲಾಗುತ್ತಿದೆ.
4,323 ಜನರು ಮಹಾರಾಷ್ಟ್ರದಿಂದ ಬಂದಿದ್ದು, 2,000 ಜನರ ಗಂಟಲು ದ್ರವ ಪರೀಕ್ಷಿಸಲಾಗಿದ್ದು, ಬಹುತೇಕ ಮಾದರಿಯ ವರದಿ ನೆಗೆಟಿವ್ ಬಂದಿರುವುದು ಸಮಾಧಾನಕರವಾಗಿದೆ ಎಂದರು.
ಮಹಾನಗರ ಪಾಲಿಕೆಯ ವತಿಯಿಂದ ಮಾಡಲಾಗಿರುವ ತೆರಿಗೆ ಪರಿಷ್ಕರಣೆ ಜಾರಿಗೆ ತರುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಇನ್ನೂ ಚರ್ಚೆ ನಡೆದಿದ್ದು, ಮುಖ್ಯಮಂತ್ರಿಗಳು ಹಾಗೂ ನಗರಾಭಿವೃದ್ಧಿ ಇಲಾಖೆಯ ಸಚಿವರ ಜೊತೆ ಇನ್ನೊಂದು ಸುತ್ತು ಚರ್ಚಿಸಿದ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಚಿವ ಶೆಟ್ಟರ್ ಹೇಳಿದರು.
ಪ್ರತಿ ಮೂರು ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕರಣೆ ಮಾಡಬೇಕು ಎಂಬ ನಿಯಮ ಇರುವುದರಿಂದ ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ನಿರ್ಧಾರ ಆಗಬೇಕಿದೆ. ಒಂದು ವೇಳೆ ನಗರದ ಜನರು ಈಗಾಗಲೇ ತೆರಿಗೆಯನ್ನು ಪಾವತಿಸಿದ್ದರೆ ಮುಂಬರುವ ದಿನಗಳಲ್ಲಿ ಸರ್ಕಾರ ತೆಗೆದುಕೊಳ್ಳುವ ನಿರ್ಧಾರ ಆಧರಿಸಿ ಮರು ಹೊಂದಾಣಿಕೆ ಮಾಡಲಾಗುವುದು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ತಿಳಿಸಿದರು.
ಈ ವೇಳೆ ರಾಜ್ಯಸಭಾ ಸದಸ್ಯರಾದ ಡಾ.ಪ್ರಭಾಕರ್ ಕೋರೆ, ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ವಿಧಾನಸಭಾ ಉಪ ಸಭಾಪತಿ ಆನಂದ ಮಾಮನಿ, ಶಾಸಕರಾದ ಅನಿಲ್ ಬೆನಕೆ, ದುರ್ಯೋಧನ ಐಹೊಳೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ನಗರ ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್ ಉಪಸ್ಥಿತರಿದ್ದರು.