ಬೆಳಗಾವಿ: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿಯ ಮನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಬಾಲಕಿಯ ಪೋಷಕರೊಂದಿಗೆ ಮಾತನಾಡಿದ ಸಚಿವೆ, ಬಾಲಕಿಗೆ ಸಾಂತ್ವನ ಹೇಳುವುದರ ಜೊತೆಗೆ ಕುಟುಂಬಕ್ಕೆ ಧೈರ್ಯ ತುಂಬಿದರು. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ತಕ್ಕ ಶಿಕ್ಷೆಯಾಗಲಿದೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಯಾವುದೇ ಒತ್ತಡಕ್ಕೂ ಮಣಿಯದೆ ನಿಮ್ಮ ಕುಟುಂಬಕ್ಕೆ ನ್ಯಾಯ ಒದಗಿಸಲಾಗುವುದು. ಅಲ್ಲದೆ ಬಾಲಕಿಗೆ ಬೇರೆ ಬೇರೆ ಇಲಾಖೆಗಳಿಂದ ದೊರೆಯುವ ನೆರವು ಒದಗಿಸಲಾಗುತ್ತದೆ ಎಂದು ತಿಳಿಸಿದರು.
ಹಾಗೆ ಪ್ರಕರಣದ ಆರೋಪಿಗೆ ತಕ್ಕ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸಚಿವೆ ಶಶಿಕಲಾ ಜೊಲ್ಲೆ ನಿರ್ದೇಶನ ನೀಡಿದರು. ಡಿಸಿಪಿ ಸೀಮಾ ಲಾಟ್ಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಬಸವರಾಜ ವರವಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.