ಗೋಕಾಕ್: ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಅವರ ಗೆಲುವು ಖಚಿತ. ಇದರಲ್ಲಿ ಯಾವುದೇ ಸಂಶಯವಿಲ್ಲ. ರಾಜ್ಯದಲ್ಲಿ ಬಿಜೆಪಿ 15 ಸ್ಥಾನಗಳಲ್ಲಿ ಗೆಲ್ಲಲಿದ್ದು, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಪೂರೈಸಲಿದ್ದಾರೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಹೊಸಪೇಟೆ ಗಲ್ಲಿಯಲ್ಲಿರುವ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆ ನಂ. 3ರಲ್ಲಿ ಮತ ಚಲಾಯಿಸಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ 6ನೇ ಬಾರಿ ಶಾಸಕರಾಗಿ ಆಯ್ಕೆಯಾಗುತ್ತಾರೆ. ಡಿಸೆಂಬರ್ 9ರ ಬಳಿಕ ಸಚಿವರಾಗಿ ಜಿಲ್ಲೆಯ ಮತ್ತು ಕ್ಷೇತ್ರದ ವಿಕಾಸಕ್ಕೆ ಶ್ರಮಿಸಲಿದ್ದಾರೆ ಎಂದರು.
ಡಿಸೆಂಬರ್ 9ರ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಬಿಜೆಪಿ ಈ ಉಪ ಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜಯ ಗಳಿಸುವ ಮೂಲಕ ಉತ್ತಮ ಆಡಳಿತ ನೀಡಲಿದೆ. ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿ ಮುಂದುವರೆಯಲಿದ್ದಾರೆ. ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಗೋಕಾಕ್ ಮತಕ್ಷೇತ್ರದಲ್ಲಿ ಈ ಬಾರಿ ಹೆಚ್ಚಿನ ಮತದಾನವಾಗಿದೆ. ಎಲ್ಲಾ ವರ್ಗದ ಪ್ರಜ್ಞಾವಂತ ಮತದಾರರು ರಮೇಶ್ ಜಾರಕಿಹೊಳಿಯನ್ನು ಬೆಂಬಲಿಸಿ ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.