ಅಥಣಿ: ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಸತ್ತಿ ಗ್ರಾಮದ ನಿವಾಸಿ ಇಸಾಕ್ ಇಮಾಮ್ ಕೋಲೂರ್ (28) ಮೃತ ಯುವಕ.
ಮೃತನು ಸತ್ತಿ ಗ್ರಾಮದಿಂದ ಚಿಕ್ಕಟ್ಟಿ ಗ್ರಾಮಕ್ಕೆ ನಿತ್ಯ ಕೆಲಸಕ್ಕೆ ಬರುತ್ತಿದ್ದನು. ಇಂದು ಸಹ ಎಂದಿನಂತೆ ಬಂದು ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಂತಿ ಹರಿದು ಬಿದ್ದಿದೆ. ಪರಿಣಾಮ ಇಸಾಕ್ ಇಮಾಮ್ ಕೋಲೂರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಅಥಣಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಇನ್ನು ವಿಷಯ ಕುರಿತು ಅಥಣಿಯ ಕಾರ್ಯನಿರ್ವಾಹಕ ಅಭಿಯಂತರ ಶೇಖರ್ ಬಹುರೂಪಿ ಅವರು, ಈಟಿವಿ ಭಾರತ ಜೊತೆ ದೂರವಾಣಿ ಮೂಲಕ ಮಾತನಾಡಿ, ಸ್ಥಳ ಪರಿಶೀಲನೆ ಮಾಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ವ್ಯಕ್ತಿಗೆ ಇಲಾಖೆಯಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.