ಬೆಳಗಾವಿ : ಹಳೇ ವೈಷಮ್ಯ ಹಿನ್ನೆಲೆ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಭಾನುವಾರ ರಾತ್ರಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ. ಗೋಕಾಕ್ ಪಟ್ಟಣದ ಆದಿಜಾಂಬವ ನಗರದ ನಿವಾಸಿ ಶಾನೂರು ಪೂಜಾರಿ (27) ಕೊಲೆಯಾದ ಯುವಕ.
ಘಟನೆಯಿಂದ ಕೆರಳಿದ ಮೃತ ಯುವಕನ ಕುಟುಂಬಸ್ಥರು ಅದೇ ಕಾಲೋನಿಯ ಯುವಕರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ, ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ 1 ಬೈಕ್, 1 ಕಾರು ಜಖಂಗೊಂಡಿವೆ. ನೂರಕ್ಕೂ ಹೆಚ್ಚು ಜನರು ಜಮಾಯಿಸಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಗೋಕಾಕ್ ಶಹರ್ ಠಾಣಾ ಪೊಲೀಸರು ಉದ್ರಿಕ್ತರನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ಈ ವೇಳೆ ಆರೋಪಿಗಳನ್ನು ಬಂಧಿಸುವಂತೆ ಮೃತನ ಕುಟುಂಬಸ್ಥರು ಪಟ್ಟು ಹಿಡಿದು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಗೋಕಾಕ್ ಪಟ್ಟಣದಲ್ಲಿ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಪ್ರಕರಣ ಸಂಬಂಧ ಸ್ಥಳಕ್ಕೆ ಧಾವಿಸಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪರಿಸ್ಥಿತಿ ಹತೋಟಿಗೆ ತಂದಿದ್ದು, ಸದ್ಯ ವಾತಾವರಣ ತಿಳಿಯಾಗಿದೆ. ನಾನು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಗೋಕಾಕ್ ಶಹರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ : ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿದ್ದ ಘಟನೆ ಉಡುಪಿ ಜಿಲ್ಲೆಯ ನೇಜಾರುವಿನ ತೃಪ್ತಿನಗರ ಎಂಬಲ್ಲಿ ಭಾನುವಾರ ನಡೆದಿತ್ತು. ಮನೆಗೆ ನುಗ್ಗಿದ ದುಷ್ಕರ್ಮಿಗಳು ತಾಯಿ ಮತ್ತು ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದರು. ಈ ವೇಳೆ ವೃದ್ಧೆಯೊಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊಲೆಯಾದವರನ್ನು ಹಸೀನಾ (46), ಅಫ್ನಾನ್ (23), ಅಯ್ನಾಝ್ (21), ಆಸಿಂ (12) ಎಂದು ಗುರುತಿಸಲಾಗಿತ್ತು. ಒಂದೇ ಕುಟುಂಬದ ನಾಲ್ವರ ಹತ್ಯೆಯನ್ನು ಕಂಡು ಇಡೀ ಗ್ರಾಮವೇ ಬೆಚ್ಚಿಬಿದ್ದಿತ್ತು.
ಈ ಕುರಿತು ಪ್ರತಿಕ್ರಿಯಿಸಿದ್ದ ಉಡುಪಿ ಎಸ್ಪಿ ಡಾ ಅರುಣ್, ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈಯಲಾಗಿದೆ. ಈ ಸಂಬಂಧ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತದೆ. ತನಿಖೆ ಬಳಿಕ ಕೊಲೆಗೆ ಕಾರಣ ತಿಳಿದುಬರಲಿದೆ ಎಂದು ಹೇಳಿದರು.
ಇದನ್ನೂ ಓದಿ : ಉಡುಪಿ: ತಾಯಿ, ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ