ಬಳ್ಳಾರಿ: ಇಲ್ಲಿನ ಮುಖ್ಯ ರೈಲ್ವೆ ನಿಲ್ದಾಣದಿಂದ 1,550 ಜಾರ್ಖಂಡ್ ವಲಸಿಗರು ಶ್ರಮಿಕ್ ವಿಶೇಷ ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಈ ರೈಲು ಉತ್ತರಪ್ರದೇಶ ದತ್ತ ಇಂದು ಬೆಳಿಗ್ಗೆ ತೆರಳಿದೆ.
ಬಳ್ಳಾರಿ ರೈಲ್ವೆ ನಿಲ್ದಾಣದಿಂದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಅಪರ ಜಿಲ್ಲಾಧಿಕಾರಿ ಮಂಜುನಾಥ, ಅಪರ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ, ಪ್ರೊಬೆಷನರಿ ಐಎಎಸ್ ಈಶ್ವರ್ ಕಾಂಡೂ, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ಡಿವೈಎಸ್ಪಿ ರಾಮರಾವ್ ಸೇರಿದಂತೆ ಅನೇಕರು ಸುರಕ್ಷಿತವಾಗಿ ತಮ್ಮೂರನ್ನು ತಲುಪಿ, ಮತ್ತೆ ಬಳ್ಳಾರಿ ಜಿಲ್ಲೆಗೆ ಅತ್ಯಂತ ಖುಷಿಯಿಂದ ಬನ್ನಿ ಎಂದು ಶುಭ ಹಾರೈಸಿದರು.
ಬಳ್ಳಾರಿ, ತೋರಣಗಲ್ಲು ಸೇರಿದಂತೆ ಜಿಲ್ಲೆಯ ವಿವಿಧೆಡೆ ಜೀವನ ನಿರ್ವಹಣೆಗೆ ಬಂದಿದ್ದ ಜಾರ್ಖಂಡ್ ರಾಜ್ಯದ 1,550 ಜನ ವಲಸಿಗರನ್ನು ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಹಾಗೂ ತೋರಣಗಲ್ಲಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಪ್ರಮಾಣ ಪತ್ರ ವಿತರಿಸಿ ಹಾಗೂ ಅಲ್ಲಿಯೇ ಟಿಕೆಟ್ ಅನ್ನು ನೀಡಲಾಗಿತ್ತು.
ವಲಸಿಗರನ್ನು ಅವರಿಗೆ ನೀಡಲಾದ ಟಿಕೆಟ್ನ ಹಿಂಬದಿಯಲ್ಲಿ ಬರೆಯಲಾದ ಸೀಟ್ ಸಂಖ್ಯೆಗೆ ಅನುಗುಣವಾಗಿ ರೈಲಿನಲ್ಲಿ ಕೂರಿಸಿದರು.
ಪ್ರಯಾಣದ ಸಂದರ್ಭದಲ್ಲಿ ಹಸಿವಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ಎರಡು ಪ್ಯಾಕೆಟ್ ಬಿಸ್ಕಟ್, ಎರಡು ಪ್ಯಾಕೆಟ್ ಬ್ರೆಡ್, ಮೂರು ಲೀಟರ್ ನೀರು, ಎರಡು ಆಹಾರ ಪೊಟ್ಟಣ, ಮಿರ್ಚಿ ಬಜ್ಜಿ ಹಾಗೂ ಇನ್ನಿತರ ಆಹಾರ ಸಾಮಗ್ರಿಗಳ ಕಿಟ್‌ಗಳನ್ನು ಪ್ರತಿಯೊಬ್ಬ ವಲಸಿಗರಿಗೂ ಜಿಲ್ಲಾಡಳಿತದ ವತಿಯಿಂದ ನೀಡಲಾಯಿತು.
ರೈಲ್ವೆ ನಿಲ್ದಾಣದೊಳಗೆ ಆಗಮಿಸುತ್ತಲೇ ವಲಸಿಗ ಪ್ರಯಾಣಿಕರಿಗೆ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿತ್ತು. ರೆಡ್‌ಕ್ರಾಸ್ ಸಂಸ್ಥೆಯವರು ಇದೇ ಸಂದರ್ಭದಲ್ಲಿ ಮಾಸ್ಕ್ ಹಾಗೂ ಲಘು ಉಪಹಾರ ವಿತರಿಸಿದರು. ಜಾರ್ಖಂಡ್ ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳಲು ರೈಲಿನ ಸೀಟಿನಲ್ಲಿ ಆಸೀನರಾಗಿದ್ದ ವಲಸಿಗರು ತಮ್ಮೂರ ಕಡೆ ಸುರಕ್ಷಿತವಾಗಿ ತೆರಳುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ವಲಸಿಗರನ್ನು ಸುರಕ್ಷಿತವಾಗಿ ಅವರ ಊರುಗಳಿಗೆ ಕಳುಹಿಸಿಕೊಡುವ ನಿಟ್ಟಿನಲ್ಲಿ ಸಕಲ ಕ್ರಮಗಳನ್ನು ಜಿಲ್ಲಾಡಳಿತ ವತಿಯಿಂದ ಕೈಗೊಳ್ಳಲಾಗಿದೆ. ಮಾರ್ಗಮಧ್ಯೆ ಯಾರಿಗೂ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಆಹಾರ ಪೊಟ್ಟಣಗಳನ್ನು ವಿತರಿಸಲಾಗಿದೆ. ಎಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಿ ಕಳುಹಿಸಿ ಕೊಡಲಾಗಿದೆ ಎಂದರು.
ಈ ಸಮಯದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ ಬಂಕದ್, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಚಂದ್ರಶೇಖರ ಐಲಿ, ಅಲ್ತಾಫ್ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.