ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 60 ಕ್ವಿಂಟಾಲ್ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಎಮ್ಮಿಗನೂರು ಗ್ರಾಮದ 6ನೇ ವಾರ್ಡಿನಲ್ಲಿ ಇರುವ ಧನುಂಜಯ ಹಿಟ್ಟಿನ ಗಿರಣಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು 1.56 ಲಕ್ಷ ರೂ. ಮೌಲ್ಯದ 60 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಕುರುಗೋಡು ತಾಲೂಕಿನ ಎಮ್ಮಿಗನೂರು ಗ್ರಾಮದ ಸಣ್ಣರಾಜ ಎಂಬುವವರು ಈ ಪಡಿತರ ಅಕ್ಕಿಯನ್ನ ಸಂಗ್ರಹಿಸಿಟ್ಟಿದ್ದರು ಎಂದು ತಿಳಿದು ಬಂದಿದೆ.
ಕುರುಗೋಡು ಪೊಲೀಸ್ ಠಾಣೆಯ ಸಿಪಿಐ ಚಂದನ್ ಗೋಪಾಲ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಹಾರ ನಿರೀಕ್ಷಕ ಶರಣಯ್ಯ ಸೇರಿದಂತೆ ಇತರ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು. ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.