ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯಕ್ಕೆ ಅರಣ್ಯ, ಪರಿಸರ ಹಾಗೂ ಜೀವವೈವಿಧ್ಯ ಇಲಾಖೆ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಒಂದು ಗಂಟೆಗೂ ಹೆಚ್ಚು ಕಾಲ ವಿಶ್ವವಿದ್ಯಾಲಯದಲ್ಲಿದ್ದ ಸಚಿವರು, ವಿವಿಧ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ವಿವಿಯ ಮುಂಭಾಗದಲ್ಲಿರುವ 75 ಎಕರೆ ಜಾಗವನ್ನು ವಿಶ್ವವಿದ್ಯಾಲಯದ ಸುಪರ್ದಿಗೆ ವಹಿಸಬೇಕೆಂಬ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳು, ಕಂದಾಯ ಇಲಾಖೆ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಬ್ಯಾಂಕ್ ವ್ಯವಸ್ಥಾಪಕರು ಮತ್ತು ವಿವಿಯ ಕುಲಪತಿಗಳನ್ನು ಒಳಗೊಂಡ ಸಭೆಯನ್ನು ಶೀಘ್ರವೇ ಕರೆದು ಈ ಜಾಗವನ್ನು ವಿಶ್ವವಿದ್ಯಾಲಯಕ್ಕೆ ಹಸ್ತಾಂತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗಾಗಿ ಮತ್ತು ಮೂಲಸೌಕರ್ಯ ಹೆಚ್ಚಿಸಲು ಅವಶ್ಯಕವಿರುವ ಅನುದಾನವನ್ನು ಜಿಲ್ಲಾ ಖನಿಜ ಪ್ರತಿಷ್ಠಾನ (ಡಿಎಂಎಫ್) ಯೋಜನೆಯಡಿ ಒದಗಿಸಬೇಕೆಂದು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸಿದ್ದು ಆಲಗೂರ ಮನವಿ ಪತ್ರ ನೀಡಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ಬಿ ಕೆ ತುಳಸಿಮಾಲ, ಹಣಕಾಸು ಅಧಿಕಾರಿಗಳಾದ ಡಾ.ಕೆ.ಸಿ.ಪ್ರಶಾಂತ್ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಟಿ. ಮುರಳೀಧರ್ ಇದ್ದರು.