ಬಳ್ಳಾರಿ : ಗೃಹ ರಕ್ಷಕದಳದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಗೃಹ ರಕ್ಷಕ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಪ್ರಶಸ್ತಿ ನೀಡಿ ಗೌರವಿಸಿದರು. ಬಳಿಕ ಮಾತನಾಡಿದ ಅವರು, ಗೃಹ ರಕ್ಷಕ ದಳದ ಸಿಬ್ಬಂದಿ ವರ್ಗ ಮತ್ತು ಅವರ ಕುಟುಂಬದವರನ್ನು ಒಂದೇ ಕಡೆ ಸೇರಿಸಿ ವಾರ್ಷಿಕೋತ್ಸವ ಆಚರಿಸಲಾಗಿದೆ. ಇದು ರಾಜ್ಯದಲ್ಲಿಯೇ ಮೊದಲು. ಇದರಿಂದಾಗಿ ಸಂಬಂಧಗಳ ಬೆಳೆವಣಿಗೆ ಮತ್ತು ಟೀಮ್ ವರ್ಕ್ಗೆ ಅನುಕೂಲಕರವಾಗಿದೆ ಎಂದು ಹೇಳಿದರು.
ವಿಶೇಷವಾಗಿ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಗೃಹರಕ್ಷಕದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಐದು ಬಡ ಮಕ್ಕಳಿಗೆ ಬಟ್ಟೆ, ಪುಸ್ತಕ, ಪೆನ್ನು ಉಚಿತವಾಗಿ ವಿತರಣೆ ಮಾಡುತ್ತಿದ್ದಾರೆ ಎಂದರು. ವಿವಿಧ ಕ್ಷೇತ್ರದಲ್ಲಿ ಶಿಸ್ತಿನಿಂದ ಕರ್ತವ್ಯ ನಿರ್ವಹಿಸಿದ ಗೃಹ ರಕ್ಷಕ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ಪದಕ ಪಡೆದ ಗೃಹರಕ್ಷಕದಳದ ಮೂವರು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಸನ್ಮಾನಿಸಿದರು.