ಬಳ್ಳಾರಿ: ಬಳ್ಳಾರಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಸದಸ್ಯರ ರಾಜೀನಾಮೆ ಮುಂದುವರೆದಿದೆ. ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಕಟ್ಟಿದ ಮೇಲೆ ಅವರ ಪಕ್ಷಕ್ಕೆ ಸೇರುವವರು ಬಿಜೆಪಿಗೆ ಒಬ್ಬೊಬ್ಬರಾಗೇ ರಾಜೀನಾಮೆ ಕೊಡಲು ಶುರು ಮಾಡಿದ್ದಾರೆ.
ಇಂದು ಬಿಜೆಪಿಯ ಜಿಲ್ಲಾ ಸಮಿತಿಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜೆ. ಚಂದ್ರ ಅವರು ಬಿಜೆಪಿ ಜಿಲ್ಲಾಧ್ಯಕ್ಷ ಮುರಹರಿಗೌಡ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಜನಾರ್ದನ ರೆಡ್ಡಿ ಅವರನ್ನು ಪಕ್ಷ ನಡೆಸಿಕೊಂಡ ರೀತಿಯಿಂದ ಬೇಸತ್ತು ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ. ನಿನ್ನೆ ಬಳ್ಳಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹಾಗೂ ಬೂಡಾ ಮಾಜಿ ಅಧ್ಯಕ್ಷ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೆ ಜೆ. ಚಂದ್ರ ಅವರು ಜಿಲ್ಲಾ ಸಮಿತಿಯ ಕಾರ್ಯಕಾರಿಣಿ ಸಮಿತಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಜನಾರ್ದನ ರೆಡ್ಡಿ, ಬಿಜೆಪಿಯಿಂದ ಹೊರ ಬಂದಿರುವುದಾಗಿ ಮತ್ತು ಹೊಸ ಪಕ್ಷ ಕಟ್ಟುವ ನಿರ್ಧಾರ ಮಾಡಿರುವುದಾಗಿ ಹೇಳಿದ್ದರು. ಅಲ್ಲದೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಅಸಮಾಧಾನ ಹೊರಹಾಕುತ್ತಾ ಕೆಲವು ರಾಜಕೀಯ ಘಟನಾವಳಿಗಳನ್ನು ಹೇಳಿಕೊಂಡಿದ್ದರು.
ಇದನ್ನೂ ಓದಿ: 2022ನೇ ವರ್ಷದ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಹಿರಿಯ ಕಾಂಗ್ರೆಸ್ ನಾಯಕ ಆರ್ ವಿ ದೇಶಪಾಂಡೆ ಆಯ್ಕೆ!