ಬಳ್ಳಾರಿ: ಕೊರೊನಾ ಎರಡನೇ ಅಲೆ ಅತ್ಯಂತ ವೇಗವಾಗಿ ಹರಡುತ್ತಿರುವ ಹಿನ್ನೆಲೆ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳನ್ನ ನಾಳೆಯಿಂದ ಐದು ದಿನಗಳ ಕಾಲ ಸಂಪೂರ್ಣವಾಗಿ ಲಾಕ್ಡೌನ್ ಮಾಡಲಾಗುವುದೆಂದು ಜಿಲ್ಲಾಧಿಕಾರಿ ಪವನ್ ಕುಮಾರ ಮಾಲಪಾಟಿ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲಾ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿಂದು ನಡೆದ ಪ್ರಧಾನಿ ಮೋದಿ ಅವರೊಂದಿಗಿನ ವಿಡಿಯೊ ಕಾನ್ಫರೆನ್ಸಿನಲ್ಲಿ ಭಾಗಿಯಾದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದ್ರು. ನಾಳೆ ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿ ಸೇರಿದಂತೆ ಇನ್ನಿತರೆ ಸಾಮಾನು ಸರಂಜಾಮು ಖರೀದಿಗೆ ಅವಕಾಶ ನೀಡಲಾಗಿದ್ದು, ಮೇ 19 ರಿಂದ 24 ರ ಬೆಳಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿರುತ್ತೆ. ಅನಗತ್ಯವಾಗಿ ಓಡಾಡುವವರಿಗೆ ದಂಡ ವಿಧಿಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.
ಅಂತಾರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸರಕು ಸಾಗಣೆ ವಾಹನ ಸೇರಿದಂತೆ ವೈದ್ಯಕೀಯ ಸೇವೆಗಳಿಗೆ ಮಾತ್ರ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಹಾಲು ಮತ್ತು ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಅದು ಕೂಡ ತಳ್ಳುವ ಗಾಡಿ ಅಥವಾ ಹಾಪ್ ಕಾಮ್ಸ್ ಸೇವೆಯಿಂದ ತರಕಾರಿಗಳ ಪೂರೈಕೆಗೆ ನಿರ್ಧರಿಸಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಎಸ್ಪಿ ಸೈದಲು ಅಡಾವತ್ ಮಾತನಾಡಿ, ಗಡಿಭಾಗದಲ್ಲಿ ಸಂಪೂರ್ಣವಾಗಿ ಕಟ್ಟೆಚ್ಚರ ವಹಿಸಲಾಗಿದೆ. ಲಾಕ್ಡೌನ್ ಸಮಯದಲ್ಲಿ ಅನಗತ್ಯವಾಗಿ ಹೊರಬಂದ್ರೆ ಮಾತ್ರ ವಾಹನ ಸೀಜ್ ಮಾಡಲಾಗುವುದೆಂದು ಎಚ್ಚರಿಸಿದ್ದಾರೆ.