ಬಳ್ಳಾರಿ: ಬರ ಪರಿಸ್ಥಿತಿ ನಿರ್ವಹಣೆ ಕುರಿತು ಪ್ರತಿನಿತ್ಯ ನಿಗಾವಹಿಸಿ ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಸ್ಥಿತಿಗತಿ ಅರಿಯಿರಿ ಹಾಗೂ ಅತ್ಯಂತ ಪರಿಣಾಮಕಾರಿಯಾಗಿ ಬರ ಪರಿಸ್ಥಿತಿ ನಿರ್ವಹಣೆ ಮಾಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬರ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣ ಮೂಲಕ ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಒಗಳೊಂದಿಗೆ ಸಿಎಂ ಇಂದು ವಿಡಿಯೋ ಸಂವಾದ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು. ಕುಡಿಯುವ ನೀರಿನ ವ್ಯವಸ್ಥೆ, ಜಾನುವಾರು ಸಂರಕ್ಷಣೆಗಾಗಿ ಮೇವು ಲಭ್ಯತೆ, ಗೋಶಾಲೆ ಹಾಗೂ ಮೇವು ಬ್ಯಾಂಕ್, ಗುಳೆ ತಡೆಗಟ್ಟುವ ನಿಟ್ಟಿನಲ್ಲಿ ಉದ್ಯೋಗ ಸೃಜನೆ, ಕಾಮಗಾರಿಗಳ ಪ್ರಗತಿ ಸೇರಿದಂತೆ ವಿವಿಧ ರೀತಿಯ ಬರ ಪರಿಸ್ಥಿತಿ ನಿರ್ವಹಣೆ ಕೆಲಸಗಳನ್ನು ಸಮರ್ಪಕವಾಗಿ ಮಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಸೂಚಿಸಿದ್ರು.
ಬಳ್ಳಾರಿ ಜಿಲ್ಲೆಯಲ್ಲಿನ ಬರ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಇದುವರೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ ಡಾ. ವಿ.ರಾಮ್ ಪ್ರಸಾತ್ ಮನೋಹರ್, ಜಿಲ್ಲೆಯಲ್ಲಿ 49 ಸಮಸ್ಯಾತ್ಮಕ ನೀರಿನ ಗ್ರಾಮಗಳೆಂದು ಗುರುತಿಸಲಾಗಿದ್ದು, ಅಲ್ಲಿ 80 ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಆ ಸ್ಥಳದಲ್ಲಿ ಪಿಡಿಒಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದು, ನೀರು ಸರಬರಾಜು ನಿರ್ವಹಣೆ ನೋಡಿಕೊಳ್ಳುತ್ತಿದ್ದಾರೆ ಎಂದರು.
ಇದೇ ವೇಳೆ ಬರ ಪರಿಸ್ಥಿತಿಯ ಈ ಸಂದರ್ಭದಲ್ಲಿ ಗುಳೆ ತಡೆಗಟ್ಟುವ ನಿಟ್ಟಿನಲ್ಲಿ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿ ಬಳ್ಳಾರಿ ಜಿಲ್ಲೆ ಉತ್ತಮ ಪ್ರಗತಿ ಸಾಧಿಸಿರುವುದಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದ್ರು.