ಬಳ್ಳಾರಿ: ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ನೆರೆ ಪ್ರದೇಶಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಲ್ಲವೆಂದು ಜಿಲ್ಲಾ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗುರುವಾರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿಯ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಕಾರ್ಯಕರ್ತ ಪಾಟೀಲ್ ಮಾತನಾಡಿ, ಬಿಜೆಪಿ ಸರ್ಕಾರದ ರಾಜಕೀಯ ವ್ಯಕ್ತಿಗಳಿಗೆ ಮಾನ ಮರ್ಯಾದೆ ಇದ್ರೆ, ಮೊದಲು ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಕೂಡಲೇ 5,000 ಕೋಟಿ ರೂಪಾಯಿ ಬಿಡುಗಡೆ ಮಾಡಿಸಬೇಕು ಎಂದು ಸವಾಲು ಹಾಕಿದರು.
ಈ ಪ್ರತಿಭಟನೆಯಲ್ಲಿ ಕೆ.ಸಿ. ಕೊಂಡಯ್ಯ, ಕೆ.ಎಸ್.ಎಲ್.ಸ್ವಾಮಿ, ಮಾಜಿ ಶಾಸಕ ಸೂರ್ಯ ನಾರಾಯಣ ರೆಡ್ಡಿ, ಜಿಲ್ಲಾ ಅಧ್ಯಕ್ಷ ಜಿ.ಎಸ್. ಮಹಮ್ಮದ್ ರಫೀಕ್ ಹಾಗೂ ಹಲವು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.