ಬಳ್ಳಾರಿ: ಜಿಲ್ಲೆಯಲ್ಲಿ ಓರ್ವ ಎಸ್ಎಸ್ಎಲ್ಸಿ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಮೂವರು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸೋಂಕು ತಗುಲಿದಂತಾಗಿದೆ.
ಜೂ. 25ರಂದು ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಬಳ್ಳಾರಿ ತಾಲೂಕಿನ ಕಪ್ಪಗಲ್ಲು ಗ್ರಾಮಕ್ಕೆ ಬೈಕ್ನಲ್ಲಿ ಇಬ್ಬರು ವಿದ್ಯಾರ್ಥಿಗಳು ಹಿಂತಿರುಗುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಬ್ಬರ ಪೈಕಿ ಓರ್ವನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಹಿಂದೆ ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದ್ದರಿಂದ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ. ಅವರಿಬ್ಬರೂ ಕೂಡ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮುಂದಿನ ಬಾರಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದೆಂದು ಡಿಡಿಪಿಐ ಸಿ.ರಾಮಪ್ಪ ತಿಳಿಸಿದ್ದಾರೆ.