ಬಳ್ಳಾರಿ: ಕೊರೊನಾ ಸೊಂಕು ನಿಯಂತ್ರಣ ಔಷಧ ತಯಾರಿಕೆಯ ಸಂಶೋಧನೆಗಳು ವಿಶ್ವದೆಲ್ಲೆಡೆ ನಡೆಯುತ್ತಿದ್ದು, ನಿಯಮಾನುಸಾರ ಪ್ರಯೋಗಗಳು ನಡೆಯುತ್ತಿವೆ.
ಲಸಿಕೆಯು ಶೀಘ್ರದಲ್ಲಿ ಜನಸೇವೆಗೆ ಲಭ್ಯವಾಗುವ ನಿರೀಕ್ಷೆ ಇದ್ದು, ಲಸಿಕೆಯನ್ನು ಮೊದಲ ಆದ್ಯತೆಯಾಗಿ ಸೊಂಕು ನಿಯಂತ್ರಣದಲ್ಲಿ ಕಾರ್ಯಪ್ರವೃತ್ತರಾಗಿರುವವರಿಗೆ ವಿತರಿಸಲು ಅರ್ಹರಿರುವವರ ವಿವರವಾದ ಮತ್ತು ನಿಖರವಾದ ಮಾಹಿತಿಯನ್ನು ಸಂಗ್ರಹಿಸುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೋವಿಡ್-19 ಲಸಿಕಾ ಸಂಬಂಧ ಜಿಲ್ಲಾ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿಗಳ ವಿವರಗಳನ್ನು ಸಂಗ್ರಹಿಸಲಾಗಿದೆ. ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಯವರು ತಮ್ಮಲ್ಲಿರುವ ಎಲ್ಲಾ ವೈದ್ಯರು ಹಾಗೂ ಸಿಬ್ಬಂದಿಗಳ ವಿವರಗಳನ್ನು ನಾಳೆ ಸಂಜೆಯೊಳಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು ಎಂದು ಹೇಳಿದ ಡಿಸಿ ನಕುಲ್, ಈ ಕುರಿತು ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್ಗಳಿಗೆ ಮಾಹಿತಿ ರವಾನಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಪ್ರಮುಖ ಆಸ್ಪತ್ರೆಯಾಗಿರುವ ವಿಮ್ಸ್ನ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಮಾಹಿತಿ ಕೂಡಲೇ ಒದಗಿಸುವಂತೆ ನಿರ್ದೇಶನ ನೀಡಿದ ಅವರು ಇವರೊಂದಿಗೆ ಆಯುಷ್,ಆಯುರ್ವೇದಿಕ್,ಡೆಂಟಲ್ ಸಂಸ್ಥೆಗಳವರೂ ಕೂಡ ಮಾಹಿತಿ ಒದಗಿಸುವಂತೆ ಸೂಚಿಸಿದರು.
ಸರ್ಕಾರವು ಜನರ ಆರೋಗ್ಯಹಿತ ಮತ್ತು ಸುರಕ್ಷತೆಯ ದೃಷ್ಟಿಯಿಂದ ಉತ್ತಮವಾದ ಯೋಜನೆಯೊಂದನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದ್ದು, ಅರ್ಹರೆಲ್ಲರೂ ಮಾಹಿತಿ ನೀಡಿ ಸಹಕರಿಸುವಂತೆ ಅವರು ಸೂಚಿಸಿದರು.
ಈ ಕಾರ್ಯಕ್ಕಾಗಿ ನಿಯೋಜಿತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಗಮನಹರಿಸಿ, ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದ ಡಿಸಿ ನಕುಲ್, ಸೊಂಕು ನಿಯಂತ್ರಿಸುವಲ್ಲಿ ಆರೋಗ್ಯ ಇಲಾಖೆ ಈಗ ನಡೆಸುತ್ತಿರುವ ಪರೀಕ್ಷೆಗಳು ನಿರಾತಂಕವಾಗಿ ನಡೆಸುವಂತೆ ಸೂಚಿಸಿದರು.
ಈ ಸಮಯದಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಡಿಎಚ್ಒ ಡಾ.ಜನಾರ್ಧನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.