ಬಳ್ಳಾರಿ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ತುಂಗಭದ್ರಾ ನದಿಯಲ್ಲಿ ತೆಪ್ಪಗಳ ಮೂಲಕ ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದವರ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮೈಲಾರ ಸೇತುವೆ ಬಳಿ ಹೂವಿನಹಡಗಲಿ ಮತ್ತು ಹರಪನಹಳ್ಳಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 27 ಕಬ್ಬಿಣದ ತೆಪ್ಪ ಮತ್ತು 40 ಬಿದಿರಿನ ತೆಪ್ಪಗಳನ್ನು ವಶಪಡಿಸಿಕೊಂಡಿದ್ದಾರೆ.
ತೆಪ್ಪಗಳಲ್ಲಿ ಮರಳು ತುಂಬಿ ನದಿಯಲ್ಲೇ ಹಾವೇರಿ ಜಿಲ್ಲೆಯ ಅರಳಿಹಳ್ಳಿಯ ದಡಕ್ಕೆ ಸಾಗಿಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ನಡೆಸುತ್ತಿದ್ದಂತೆಯೇ ಅಕ್ರಮ ಮರಳು ಸಾಗಣೆಯ ದಂಧೆಕೋರರು ತೆಪ್ಪಗಳನ್ನು ನದಿಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.